ಮೈಸೂರು: ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಬೇಕು.
ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರವಾನಗಿ ಪಡೆದುಕೊಳ್ಳಬೇಕು. ಈ ಬಗ್ಗೆ ಹೊಸದಾಗಿ ಸರ್ಕಾರದ ಆದೇಶವಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಹೆಚ್ಚು ತಂಬಾಕು ಬೆಳೆಯಲಾಗುತ್ತಿದ್ದು, ಪ್ರತಿ ವರ್ಷ ಶೇ.5ರಷ್ಟು ತಂಬಾಕು ಬೆಳೆ ಬೆಳೆಯುವುದನ್ನು ಕಡಿಮೆ ಮಾಡಬೇಕು. ತಂಬಾಕು ಬೆಳೆಗಾರರು ತೋಟಗಾರಿಕೆ, ಆಹಾರದ ಬೆಳೆಗಳು ಹಾಗೂ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇರುವ ಸ್ಕ್ವಾಡ್ ಟೀಮ್‌ಗಳು ಅನಿರೀಕ್ಷಿತವಾಗಿ ದಾಳಿ ಮಾಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ನಿಯಮ ಉಲ್ಲಂಘನೆ ಆಗಿರುವ ಕುರಿತು ಪ್ರಕರಣ ದಾಖಲಿಸಬೇಕು. ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ತಂಬಾಕು ಉತ್ಪನ್ನಗಳ ಬಳಕೆ ಕಡಿಮೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಯುವ ಸಮೂಹವು ಸಾರ್ವಜನಿಕ ಸ್ಥಳ, ಕಾಲೇಜು ಆವರಣಗಳಲ್ಲಿ ಬೀಡಿ ಸಿಗರೇಟು ಸೇವನೆ ಮಾಡುವುದನ್ನು ನಿಲ್ಲಿಸಬೇಕು. ಉಲ್ಲಂಘನೆ ಮಾಡಿದರೆ ಪೊಲೀಸ್ ಇಲಾಖೆ ದಂಡ ವಿಧಿಸಬೇಕು ಎಂದು ತಿಳಿಸಿದರು.
ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಟ್ಪಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಶಾಲೆ-ಕಾಲೇಜುಗಳನ್ನು ತಂಬಾಕುಮುಕ್ತ ವಲಯಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಾಲಾ, ಕಾಲೇಜುಗಳ ಬಳಿ ತಂಬಾಕು ಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಪ್ರವಾಸಿತಾಣ, ಬಾರ್ ಮತ್ತು ರೆಸ್ಟೋರೆಂಟ್, ಟೀ ಸ್ಟಾಲ್, ಕಾಂಡಿಮೆಂಟ್, ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ವಲಯ ನಾಮಫಲಕ ಅಳವಡಿಸಬೇಕು. ಜತೆಗೆ ಬಿಡಿ ಬಿಡಿಯಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮಹಾನಗರ ಪಾಲಿಕೆ, ನಗರಸಭೆ ಹಾಗೂ ಪುರಸಭೆ ವ್ಯಾಪಾರದ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 2,123 ಪ್ರಕರಣ ದಾಖಲಿಸಿ 2,39,220 ರೂ. ದಂಡ ವಿಧಿಸಲಾಗಿದ್ದು, ದಾಖಲಿಸಿರುವ ಪ್ರಕರಣಗಳು ತುಂಬ ಕಡಿಮೆಯಾಗಿದೆ. ಹೆಚ್ಚಿನ ನಿಯಮ ಉಲ್ಲಂಘನೆ ಆಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸವಿತಾ (ಅಭಿವೃದ್ಧಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜು, ಜಿಲ್ಲಾ ಸಮಾಲೋಚಕ ಶಿವಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.