ಸೋಮವಾರಪೇಟೆ: ಶಿಕ್ಷಕರ ಕೆಲಸ ದೇವರ ಕೆಲಸ, ಶಿಕ್ಷಕರಿಂದ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. ಮಾದರಿ ದೇಶವನ್ನು ಕಟ್ಟಲು ಶಿಕ್ಷಕರ ಪಾತ್ರವೇ ಬಹಳ ಮಹತ್ವವಾಗಿದೆ ಎಂದು ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಆಶ್ರಯದಲ್ಲಿ ಬುಧವಾರ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಬದುಕುವ ಮಾರ್ಗವನ್ನು ತಿಳಿಸಿಕೊಡುತ್ತಾರೆ. ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ನಾಲ್ಕನೇ ಸ್ಥಾನ ಪಡೆದಿದೆ. ಮುಂದಿನ ಸಾಲಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದುವರಿಯಬೇಕು ಎಂದು ಆಶಿಸಿದರು. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಶಿಕ್ಷಣ ಸಚಿವರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.
ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ.ಜಮೀರ್ ಅಹಮ್ಮದ್ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಶಿಕ್ಷಣ ಕ್ಷೇತ್ರವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು. ಶಿಕ್ಷಣ ಮನುಕುಲಕ್ಕೆ ಮಾನವೀಯತೆ ಕಲಿಸಿ ಜೀವನಮಾರ್ಗ ನಡೆಸುವ ಸಾಧನವಾಗಬೇಕು. ಮಕ್ಕಳಿಗೆ ಪಠ್ಯದೊಂದಿಗೆ ನೈತಿಕ ಮೌಲ್ಯಗಳನ್ನು ಕಲಿಸಬೇಕು. ಶಿಕ್ಷಕರು ಆಶಾವಾದದೊಂದಿಗೆ ವಿಮರ್ಶಾತ್ಮಕವಾದ ಚಿಂತನೆಗಳನ್ನು ಬೆಳೆಸಿಕೊಂಡರೆ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕೊಡಗು ಜಿಲ್ಲೆಯ ಭೌಗೋಳಿಕ ಪರಿಸ್ಥಿತಿಯನ್ನು ಅವಲೋಕಿಸಿದರೆ ಇಲ್ಲಿ ಒತ್ತಡದ ನಡುವೆ ಶಿಕ್ಷಕರು ಕೆಲಸ ಮಾಡಬೇಕಾಗಿದೆ. ಇಂತಹ ಕ್ಷಿಷ್ಟಕರ ವಾತಾವರಣದ ನಡುವೆಯೂ ಸರ್ಕಾರಿ ಕನ್ನಡ ಶಾಲೆಗಳು ಉಳಿದಿರುವುದು ಶ್ಲಾಘನೀಯ ಎಂದರು.
ಭವಿಷ್ಯದಲ್ಲಿ ಶಿಕ್ಷಕರ ಯಾವುದೇ ಸಮಸ್ಯೆಗಳನ್ನು ಸರ್ಕಾರದ ಮೂಲಕ ಪರಿಹರಿಸಲು ರಾಜ್ಯ ಸಂಘ ಕಟಿಬದ್ಧವಾಗಿದೆ ಎಂದರು.
ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಬಸವರಾಜು, ಡಯಟ್ ಪ್ರಾಂಶುಪಾಲ ಉದಯ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಮತ್ತು ಪದಾಧಿಕಾರಿಗಳು, ತಾಲೂಕು ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ನಿವೃತ್ತ ಶಿಕ್ಷಕರು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಯಲ್ಲಿ ಹೆಚ್ಚು ವರ್ಷಗಳ ಕಾಲ ಸೇವೆ ಮಾಡಿದ ಶಿಕ್ಷಕರು. ಶೇಕಡ ನೂರು ಸಾಧನೆ ಮಾಡಿದ ಶಾಲೆಗಳು. ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.