ಶಿಕಾರಿಪುರ: ದೇಶದ ನಿಜವಾದ ಸಂಪತ್ತು ಎಂದರೆ ಶಿಕ್ಷಣ. ಶಿಕ್ಷಣ ಕ್ಷೇತ್ರದ ಅಭ್ಯುದಯವೇ ರಾಷ್ಟ್ರದ ಅಭಿವೃದ್ಧಿ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುತ್ತಿವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ಯಾಂಪಸ್‌ನಲ್ಲಿ ನಿರ್ಮಿಸುತ್ತಿರುವ ಒಳಾಂಗಣ ಕ್ರೀಡಾಂಗಣ, ಕ್ಯಾಂಟೀನ್, ವಿದ್ಯಾರ್ಥಿನಿಯರ ಹಾಸ್ಟೆಲ್, ಸಭಾಂಗಣ, ನೂತನ ಕೊಠಡಿಗಳ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಅನುದಾನ ನೀಡಿದ ಫಲವಾಗಿ ಹಾಸ್ಟೆಲ್ಗಳು, ಮುರಾರ್ಜಿ ವಸತಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು ನಿರ್ಮಾಣವಾಗಿವೆ ಎಂದರು.
ಶಿಕಾರಿಪುರ ಪದವಿ ಕಾಲೇಜು ನಮ್ಮ ಹೆಮ್ಮೆ. ಇಲ್ಲಿ ಶಿಕ್ಷಣ ಪಡೆದವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಪೂರ್ಣವಾದರೆ ಕಾಲೇಜಿನ ಅಂದ ಇನ್ನಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.