ಭಾಲ್ಕಿ: ಬಡ ಮಕ್ಕಳು ವಿದ್ಯಾರ್ಜನೆ ಮಾಡುವ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಅಗತ್ಯ ಇರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ಪಟ್ಟಣದ ಬಸವನಗರ ಬಡಾವಣೆಯ ಶಶಿಕಾಂತ ಎಸ್.ಎಲ್.ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ೨೭.೫೫ ಲಕ್ಷ ರೂ.ವೆಚ್ಚದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳ ಕಲಿಕೆಗೆ ಬೇಕಿರುವ ಉತ್ತಮ ಶಾಲಾ ಕಟ್ಟಡಗಳು, ಕುಡಿಯುವ ನೀರು, ಶೌಚಗೃಹ, ಆಟದ ಮೈದಾನ, ವಿಜ್ಞಾನ ಪ್ರಯೋಗಾಲಯ ಸೇರಿ ಎಲ್ಲ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳಿಗೆ ಹೊಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಕ್ಷಕರು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಯತ್ನ ಹಾಕಬೇಕು. ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನ ಆದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯುತ್ತವೆ ಎಂದರು.
ಮಕ್ಕಳ ಕಲಿಕೆಗೆ ಪೂರಕವಾಗಿ ಹೊಸದಾಗಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿಕೊಡಬೇಕು ಎಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಎಇಇ ಅಲ್ತಾಫ್, ಪ್ರಭಾರಿ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ್, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ, ಕಚೇರಿ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಜಕುಮಾರ ಬಿರಾದಾರ್, ಮುಖ್ಯಗುರು ರಾಜಶೇಖರ, ಶಿಕ್ಷಣ ಹಣಮಶೆಟ್ಟಿ ಇತರರಿದ್ದರು.