ಎಚ್.ಡಿ.ಕೋಟೆ ಪಟ್ಟಣದ ಕನಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಲಾಯಿತು. 
ಜಿಲ್ಲೆ

ಶೋಷಿತರ ಏಳಿಗೆಗಾಗಿ ಶ್ರಮಿಸುತ್ತಿರುವ ಸಿಎಂ ಸಿದ್ದರಾಮಯ್ಯ

ಎಚ್.ಡಿ.ಕೋಟೆ: ಬಡವರ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮಾಜಕ್ಕೂ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟವರು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

ಪಟ್ಟಣದ ಕನಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76 ನೇ ಜನ್ಮ ದಿನದ ಅಂಗವಾಗಿ ಶನಿವಾರ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಮಾತನಾಡಿದರು. ತಮ್ಮ ಅಧಿಕಾರದ ಅವಧಿಯಲ್ಲಿ ಶೋಷಿತ ಸಮುದಾಯಗಳ ಏಳಿಗೆಗೆ ಕೆಲಸ ಮಾಡಿ, ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ದೇಶದ ಇತಿಹಾಸದಲ್ಲಿ ಯಾವ ರಾಜ್ಯದಲ್ಲಿಯೂ ಇಂತ ದೊಡ್ಡ ಬಜೆಟ್ ಮಂಡಿಸಿಲ್ಲ. ನುಡಿದಂತೆ ನಡೆದ ನಾಯಕ ಸಿದ್ದರಾಮಯ್ಯ ಅವರು, ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಎಂದರು.

ಸಿದ್ದರಾಮಯ್ಯ ಅವರ ಒಂದೇ ಒಂದು ಮಾತಿಗೆ 2017ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿ ಶಾಸಕನಾಗಿ ಆಯ್ಕೆ ಆದೆ. ನಂತರ ಎರಡನೇ ಅವಧಿಗೆ ಮತ್ತೆ ಶಾಸಕನಾಗಿ ಆಯ್ಕೆ ಆಗಲು ಸಿದ್ದರಾಮಯ್ಯ ಅವರ ಆಶೀರ್ವಾದವೇ ಕಾರಣ ಎಂದು ಸ್ಮರಿಸಿದರು.

ಕಾರ್ಯಕ್ರಮಕ್ಕೂ ಮುನ್ನಾ ಪಟ್ಟಣದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿ, ಸಾರ್ವಜನಿಕ ಆಸ್ಪತ್ರೆ ರೋಗಿಗಳು, ಬೋಚಿಕಟ್ಟೆ ಗ್ರಾಮದಲ್ಲಿರುವ ಚಿತ್ತಧಾಮದ ನಿವಾಸಿಗಳಿಗೆ ಹಣ್ಣು ವಿತರಿಸಿದರು. ಮೈಸೂರಿನ ಸುಯೋಗ್ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ನಂದಿನಿ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಜಾಜ್ ಪಾಷ, ಮನುಗನಹಳ್ಳಿ ಮಾದಪ್ಪ, ರಾಜ್ಯ ಕುರುಬ ಸಮಾಜದ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ, ಜಿಲ್ಲಾ ಅಧ್ಯಕ್ಷ ಶಿವಪ್ಪ ಕೋಟೆ, ಚಿಕ್ಕವೀರನಾಯಕ, ಜಿ.ವಿ ಸೀತಾರಾಂ ಇದ್ದರು.