ಅಜ್ಜಂಪುರ: ಅಗತ್ಯ ವಸ್ತುಗಳ ಮೇಲೆ ತೆರಿಗೆ ವಿಧಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮಾನ್ಯರ ಬದುಕನ್ನು ಕಷ್ಟಕ್ಕೆ ತಳ್ಳಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಗಾಂಧಿ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸರ್ಕಾರ ಬಡಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಜನರಿಂದ ತೆರಿಗೆ ಮೂಲಕ ಹಣ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು.
ಉಪಾಧ್ಯಕ್ಷ ಹಣ್ಣೆ ಶಶಿಧರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಚ್ಛೇ ದಿನಗಳ ಬದಲಿಗೆ ಕೆಟ್ಟ ದಿನಗಳನ್ನು ಕರುಣಿಸಿದೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಪ್ರಧಾನ ಕಾರ್ಯದರ್ಶಿ ಸೊಕ್ಕೆ ನಾಗರಾಜ್ ಮಾತನಾಡಿ, ಪೆಟ್ರೋಲ್-ಡೀಸೆಲ್ ಬೆಲೆ, ಆಹಾರ ಧಾನ್ಯ, ಅಡುಗೆ ಅನಿಲ ದರ ಹೆಚ್ಚಿಸುವ ಮೂಲಕ ತಿನ್ನುವ ಅನ್ನಕ್ಕೂ ಪರದಾಡುವಂತೆ ಮಾಡಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.