ಜಿಲ್ಲೆ

ಸಂಧ್ಯಾರಾಣಿ ಜಿಪಂ ಪ್ರಭಾರ ಅಧ್ಯಕ್ಷೆ

ಬೀದರ್: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹುದ್ದೆ ಪ್ರಭಾರವನ್ನು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಧ್ಯಾರಾಣಿ ರಾಮ ನರೋಟೆ ಅವರಿಗೆ ವಹಿಸಲಾಗಿದೆ. ಶುಕ್ರವಾರ ಸಂಧ್ಯಾರಾಣಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಪ್ರಕಾರ ಅಧ್ಯಕ್ಷ, ಉಪಾಧ್ಯಕ್ಷರನ್ನು ಚುನಾಯಿಸುವವರೆಗೆ ಅಧ್ಯಕ್ಷರ ಅಧಿಕಾರಗಳನ್ನು ಹಾಗೂ ಕರ್ತವ್ಯಗಳನ್ನು ಪ್ರಭಾರ ಅಧ್ಯಕ್ಷರು ನಿರ್ವಹಿಸಬೇಕೆಂದು ಪ್ರಾದೇಶಿಕ ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

14ರಂದು ಚುನಾವಣೆ
ತೆರವಾಗಿರುವ ಇಲ್ಲಿಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಡಿ. 14ರಂದು ಚುನಾವಣೆ ನಡೆಯಲಿದೆ. ಹಿಂದಿನ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ ಅವರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಉಳಿದ ಅವಧಿಗಾಗಿ ಹೊಸಬರ ಆಯ್ಕೆಗಾಗಿ ಚುನಾವಣೆ ನಿಗದಿಯಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಎಸ್ಟಿ) ಮಹಿಳೆ, ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಮಧ್ಯಾಹ್ನ 3ಕ್ಕೆ ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಚುನಾವಣೆ ಜರುಗಲಿದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಜಿಪಂ ಉಪ ಕಾರ್ಯದರ್ಶಿ (ಆಡಳಿತ) ಅವರಿಗೆ ಅಂದು ಮಧ್ಯಾಹ್ನ 1ರೊಳಗೆ ಸಲ್ಲಿಸಲು ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.