ಚಾಮರಾಜನಗರ: ತನ್ನ ಕೀರ್ತನೆಗಳಿಂದಲೇ ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಭಕ್ತ ಶ್ರೇಷ್ಠ ಶ್ರೀಕನಕದಾಸರ ಜಯಂತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ ಮತ್ತು ಯಳಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಸೋಮವಾರ ಅರ್ಥಪೂರ್ಣವಾಗಿ ಭಕ್ತಶ್ರೇಷ್ಠ ಕನಕ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಕೇಂದ್ರಗಳಲ್ಲೂ ತಾಲೂಕು ಆಡಳಿತದ ವತಿಯಿಂದ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ, ಕನಕದಾಸರ ಕೀರ್ತನೆಗಳ ಸ್ಮರಣೆಯನ್ನು ಮಾಡುವುದರ ಮೂಲಕ ಕನಕದಾಸರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಅದಲ್ಲದೇ ವಿವಿಧ ಸಂಘ-ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡುವುದರ ಮೂಲಕ, ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಬಹಳ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.