ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಸುಭದ್ರವಾದ ಸಂವಿಧಾನವನ್ನು ನೀಡಿದ್ದು, ಅದನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಕರೆ ನೀಡಿದರು.
ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶಕ್ಕೆ ಸಂವಿಧಾನ ಬರುವ ಮುಂಚೆ ತಳಸಮುದಾಯಗಳು ಹಾಗೂ ಮಹಿಳೆಯರ ಸ್ಥಿತಿ ಅತ್ಯಂತ ಹೀನಾಯವಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ತಳಸಮುದಾಯಗಳು ಹಾಗೂ ಮಹಿಳೆಯರಿಗೆ ಹಕ್ಕು ಅಧಿಕಾರಗಳನ್ನು ಕಲ್ಪಿಸಿಕೊಟ್ಟರು. ಈ ನಿಟ್ಟಿನಲ್ಲಿ ನಮ್ಮ ದೇಶದ ಸಂವಿಧಾನವನ್ನು ಕಪಾಡುವ ಮತ್ತು ರಕ್ಷಣೆ ಮಾಡುವ ಬಹುದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ದೇಶದ ಸಂವಿಧಾನದ ಅಡಿಯಲ್ಲಿ ಗೆದ್ದು, ಅಧಿಕಾರ ಅನುಭವಿಸುತ್ತಿರುವ ರಾಜಕಾರಣಿಗಳಿಂದಲೇ ಪ್ರಸ್ತುತ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನವಾಗುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಕುರಿತು ನಾವೆಲ್ಲರೂ ಜಾಗೃತರಾಗಬೇಕು. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವ ಜತೆಗೆ ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸಾಗಬೇಕಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕಿದೆ ಎಂದು ಹೇಳಿದರು.
ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಹೆಬ್ಬಸೂರು ಗ್ರಾಮದಲ್ಲಿ ಬಹಳ ಚೆನ್ನಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುತಪಾಲ ಭಂತೇಜಿ ಸಾನಿಧ್ಯವಹಿಸಿದ್ದರು. ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಆರ್.ಬಾಲರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಯಜಮಾನರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.
4000 ಜನರಿಗೆ ಊಟದ ವ್ಯವಸ್ಥೆ:
ಹೆಬ್ಬಸೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾರ್ಯಕ್ರಮದ ಅಂಗವಾಗಿ 70 ಗ್ರಾಮಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿತ್ತು. ಆಗಾಗಿ ಸುಮಾರು 4000 ಕ್ಕಿಂತಲೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಬಹಳ ಅಚ್ಚುಕಟ್ಟಾಗಿ ವೇದಿಕೆ ಕಾರ್ಯಕ್ರಮ ಹಾಗೂ ಊಟದ ವ್ಯವಸ್ಥೆಯನ್ನು ನಿರ್ವಹಣೆ ಮಾಡಿದರು. ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಅಂಬೇಡ್ಕರ್ ಹಾಗೂ ರಾಜಕೀಯ ಗಣ್ಯರ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಪ್ರಮುಖ ಬೀದಿಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಮಹಿಳೆಯರು ಮತ್ತು ಮಕ್ಕಳ ಪೂರ್ಣ ಕುಂಭ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಪ್ರತಿಮೆ ಅನಾವರಣ ಮಾಡಲಾಯಿತು.