ಭಾಲ್ಕಿ: ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಸಂರಕ್ಷಣಾ ಪಡೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಜಾತಂತ್ರ ವ್ಯವಸ್ಥೆ, ಅಂಬೇಡ್ಕರ್ ಪರಿಕಲ್ಪನೆ, ಸಂವಿಧಾನಕ್ಕೆ ಅಪಾಯ ಎದುರಾದಾಗ ಅದನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಸಂವಿಧಾನ ಸಂರಕ್ಷಣಾ ಪಡೆ ರಾಜ್ಯದಲ್ಲಿ ಸಂವಿಧಾನ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯ ಎಂದು ತಿಳಿಸಿದರು.
ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆ ಕಲ್ಪಿಸಿದ್ದಾರೆ. ಅಂತಹ ಸಂವಿಧಾನ ದುರುಪಯೋಗ ಆಗುತ್ತಿರುವುದು ಕಳವಳಕಾರಿ ಸಂಗತಿ. ಎಲ್ಲರೂ ಸೇರಿ ಸಂವಿಧಾನ ಆಶಯಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಭಾರತ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಅಪಾಯ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿ ಮಾತನಾಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ, ಸಂವಿಧಾನ ಸಂರಕ್ಷಣಾ ಪಡೆಯ ದುರ್ಗೇಶ, ಹೇಮಂತ, ಸರೋವರ ಬೆಂಕಿಕೇರೆ, ಶರಣು, ಗೀತಾ ಇತರರಿದ್ದರು.