ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಗಡಿನಾಡು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಡಾ.ಸೋಮಶೇಖರ್, ಕಾತ್ಯಾಯಿನಿದೇವಿ, ಷಣ್ಮುಗಪ್ಪ ಇತರರಿದ್ದರು. 
ಜಿಲ್ಲೆ

ಸಂಸ್ಕೃತಿ ರಕ್ಷಣೆ ಎಲ್ಲರ ಆದ್ಯ ಕರ್ತವ್ಯ

ಹನೂರು: ಸಂಸ್ಕೃತಿ ಮನುಷ್ಯನನ್ನು ಆಂತರಿಕವಾಗಿ ವಿಕಸಿಸುತ್ತದೆ. ಆದ್ದರಿಂದ ಸಂಸ್ಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಗಡಿನಾಡು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಲೆಗಳಿಗೆ ಮನುಷ್ಯನನ್ನು ಸೆಳೆದುಕೊಳ್ಳುವ ಶಕ್ತಿ ಇದ್ದು, ಮನಸ್ಸಿಗೆ ಮುದ ನೀಡುತ್ತವೆ. ಜಾನಪದ ಕಲೆ ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿದ್ದು, ವಿಶ್ವ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಹಾಗೆಯೇ ಸಂಸ್ಕೃತಿ ನಾಗರಿಕತೆಯನ್ನು ಪ್ರತಿಬಿಂಬಿಸುತ್ತದೆ. ಕಲೆ, ಸಾಹಿತ್ಯ, ಆಚಾರ, ವಿಚಾರಗಳನ್ನು ಶ್ರೀಮಂತಗೊಳಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಮರೆಯಾಗುತ್ತಿರುವುದು ವಿಪರ್ಯಾಸ. ಆದ್ದರಿಂದ ಸಂಸ್ಕೃತಿಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ದಿಸೆಯಲ್ಲಿ ಕನ್ನಡಿಗರು ನೆಲೆಸಿರುವ ಗಡಿ ಭಾಗದಲ್ಲಿ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

ಮಹದೇಶ್ವರ ಬೆಟ್ಟದ ಭಾಗದಲ್ಲಿ ಜನಪದ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದ್ದು, ಇಲ್ಲಿನ ಜನರು ಜನಪದ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಾಗಾಗಿ ಕಲೆ ಹಾಗೂ ಸಂಸ್ಕೃತಿಗೆ ಪ್ರೋತ್ಸಾಹ ನೀಡಬೇಕಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ತಮಿಳುನಾಡಿನ ಗಡಿಭಾಗದಲ್ಲಿರುವ ಮ.ಬೆಟ್ಟದ ಭಾಗದ ಗ್ರಾಮಗಳಲ್ಲಿ ರಸ್ತೆ, ವಿದ್ಯುತ್ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳ ಕೊರತೆ ಇದೆ. ಜತೆಗೆ ಸರ್ಕಾರದ ಕೆಲವು ಸವಲತ್ತುಗಳು ಇಲ್ಲಿನ ಜನರಿಗೆ ಕನಸಿನ ಮಾತಾಗಿದೆ. ಮುಂದಿನ ದಿನಗಳಲ್ಲಾದರೂ ಸರ್ಕಾರದ ಸವಲತ್ತುಗಳು ಸಿಗುವಂತಾಗಬೇಕು ಎಂದು ತಿಳಿಸಿದರು.

ಕಲಾವಿದರನ್ನು ಗುರುತಿಸುವ ಕೆಲಸವಾಗಲಿ: ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ಸಂಸ್ಕೃತಿ ನಾಗರಿಕತೆಯ ಪ್ರತೀಕ. ಆದ್ದರಿಂದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಮೂಲಕ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಇದರಿಂದ ಮಕ್ಕಳ ಭವಿಷ್ಯವು ಉಜ್ವಲಗೊಳ್ಳುತ್ತದೆ. ಈ ದಿಸೆಯಲ್ಲಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಕಲಾವಿದರನ್ನು ಗುರುತಿಸಿ, ಪ್ರೋತ್ಸಾಹಿಸುವಂತಹ ಕೆಲಸವಾಗಬೇಕು ಎಂದು ಹೇಳಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಕೆ.ಬಿ.ಷಣ್ಮುಗಪ್ಪ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಇತರರು ಇದ್ದರು.