ಜಿಲ್ಲೆ

ಸಕಾಲಕ್ಕೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೂಚನೆ


ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕೆಲಸಗಳನ್ನು ಸಮರ್ಪಕವಾಗಿ ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಪ್ರಸಕ್ತ ಆರ್ಥಿಕ ಸಾಲಿನ ಇಲಾಖಾವಾರು ನಿಗದಿತ ಯೋಜನೆಗಳು, ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಗುರಿಯನ್ನು ಸಾಧಿಸಲೇಬೇಕು. ಅಭಿವೃದ್ಧಿ ಕೆಲಸಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಸರ್ಕಾರಕ್ಕೆ ವಾಪಸ್ಸಾಗಬಾರದು ಎಂದರು.
ಕಾಮಗಾರಿ ಅನುಷ್ಠಾನ, ಅನುದಾನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಒಂದು ವೇಳೆ ಪ್ರಸ್ತಾವನೆಗಳಿಗೆ ಮಂಜೂರಾತಿ ಸಿಗದೇ ಬಾಕಿ ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹೊಸ ಅನ್ವೇಷಣೆಯ ಕೃಷಿ ತಾಂತ್ರಿಕತೆಗಳ ವಿಧಾನಗಳು, ಕೃಷಿ ಇಳುವರಿ, ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ರೈತರ ಜಮೀನಿನಲ್ಲಿ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಜಾವೀದ್ ನಸೀಮಾ ಖಾನ್ ಮಾಹಿತಿ ನೀಡಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿನಲ್ಲಿ ರಾಗಿ, ಭತ್ತ ಮತ್ತು ಜೋಳ ಖರೀದಿಗಾಗಿ ನೋಂದಣಿ ಕಾರ್ಯ ಜಿಲ್ಲೆಯಲ್ಲಿ ಆರಂಭವಾಗಿದೆ. 2023ರ ಜನವರಿ ಮಾಹೆಯಿಂದ ಮಾರ್ಚ್ ಅಂತ್ಯದವರಗೆ ನೋಂದಣಿಗೊಂಡ ರೈತರಿಂದ ಉತ್ಪನ್ನಗಳನ್ನು ಖರೀದಿಸಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ಸವಿತಾ ಹೇಳಿದರು. ನೀರಾವರಿ, ಮೀನುಗಾರಿಕೆ, ಅಕ್ಷರದಾಸೋಹ, ವಯಸ್ಕರ ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ, ಅರಣ್ಯ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯ ಪರಿಶೀಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿ ಎಂ.ಧನುರೇಣುಕಾ ಮತ್ತಿತರರು ಇದ್ದರು.

ವಿವಿಧ ಭೇಟಿ, ಪರಿಶೀಲನೆ


ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್ ರೂಪ್ ಕೌರ್ ನ್ಯಾಯ ಬೆಲೆ ಅಂಗಡಿ, ಮತಗಟ್ಟೆ ಕೇಂದ್ರ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಪರಿಶೀಲಿಸಿದರು. ಜಿಲ್ಲಾ ಕೇಂದ್ರದಲ್ಲಿನ ದಿಲ್ಷದ್ ನ್ಯಾಯಬೆಲೆ ಅಂಗಡಿಗೆ ತೆರಳಿ, ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ವಿತರಣೆಯಾಗುತ್ತಿರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ನಗರದ ವಿವಿಧ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಸಿಬ್ಬಂದಿ ಕಾರ್ಯವೈಖರಿಯನ್ನು ವೀಕ್ಷಿಸಿದರು. ಕೊನೆಗೆ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿದರು.

ಮತ್ತೆರಡು ಗೋಶಾಲೆ ಮಂಜೂರು

ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ ಗೋಶಾಲೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಗತ್ಯ ಸವಲತ್ತುಗಳೊಂದಿಗೆ ಪ್ರಾರಂಭಿಸಬೇಕು. ಹಾಗೆಯೇ ಜಿಲ್ಲೆಗೆ ಮತ್ತೆರಡು ಗೋಶಾಲೆಗಳನ್ನು ನಿರ್ಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಗೆ ಸೂಚಿಸಿದರು. ಚರ್ಮಗಂಟು ರೋಗ ಸಮಸ್ಯೆಗೆ ಬಿರುಸಿನ ಲಸಿಕಾರಣ, ಚಿಕಿತ್ಸೆ, ಗುಣಮುಖ ರಾಸುಗಳ ವಿಚಾರವಾಗಿ ಪಶು ವೈದ್ಯ ಸೇವಾ ಇಲಾಖೆಯ ಉಪ
ನಿರ್ದೇಶಕರು ಮಾಹಿತಿ ನೀಡಿದರು.

ಜನೌಷಧ ಕೇಂದ್ರಗಳ ಸ್ಥಾಪನೆ


ಜನೌಷಧ ಕೇಂದ್ರಗಳ ಸ್ಥಾಪನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಜಿಲ್ಲಾಸ್ಪತ್ರೆ 1, ತಾಲೂಕು ಆಸ್ಪತ್ರೆಗಳಲ್ಲಿ 5, ಇತರಡೆ 2 ಸೇರಿ 8 ಜನೌಷಧ ಕೇಂದ್ರಗಳಿವೆ. ಜಿಲ್ಲೆಯ ಸಾಮಾನ್ಯ ಜನರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಔಷಧಗಳನ್ನು ನೀಡುವ ಸಲುವಾಗಿ ಮತ್ತಷ್ಟು ಜನೌಷಧ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ್ ಕುಮಾರ್ ಮಾಹಿತಿ ನೀಡಿದರು.