ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ರಾಜ್ಯ ಮಟ್ಟದ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಿದರು. ಸಚಿವರಾದ ಎನ್.ಎಸ್.ಬೋಸರಾಜು, ಶರಣಬಸಪ್ಪ ದರ್ಶನಾಪುರ, ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ಶರಣಗೌಡ ಬಯ್ಯಪುರ, ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ, ಎ್ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲರೆಡ್ಡಿ ಇದ್ದರು. 
ಜಿಲ್ಲೆ

ಸಣ್ಣ ನಗರಗಳಿಗೂ ಕೈಗಾರಿಕೆಗಳು ವಿಸ್ತರಿಸಬೇಕು

ರಾಯಚೂರು: ಬೆಂಗಳೂರಿನಲ್ಲಿ ಮಾತ್ರ ಕೈಗಾರಿಕೆಗಳು ಸ್ಥಾಪನೆಯಾದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ರಾಜ್ಯದ 2 ಮತ್ತು 3ನೇ ದರ್ಜೆಯ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾದಾಗ ಮಾತ್ರ ಆ ಭಾಗದಲ್ಲಿ ಆರ್ಥಿಕ ಬೆಳವಣಿಗೆ ಕಾಣಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಎ್ಕೆಸಿಸಿಐನಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಈ ಭಾಗದಲ್ಲಿ ಹೂಡಿಕೆಗೆ ಏನೂ ಮಾಡಬೇಕು ಎನ್ನುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದರು.
ಇಂಜಿನಿಯರಿಂಗ್, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ದೊರೆಯುವಂತೆ ಮಾಡಲಾಗುತ್ತಿದೆ. ಜತೆಗೆ ರಾಜ್ಯದಲ್ಲಿನ 270 ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಕೈಗಾರಿಕೋದ್ಯಮಿಗಳು ಮುಂದೆ ಬಂದಲ್ಲಿ ಅವರಿಗೆ ಬೇಕಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬಹುದಾಗಿದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ಅವಕಾಶಗಳಿವೆ. ರೈಸ್‌ಮಿಲ್, ಹತ್ತಿ ಗಿರಣಿಗಳಿಗಾಗಿ ಸಾವಿರಾರು ಕೋಟಿ ರೂ. ಹೂಡಿಕೆ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಬೇಕಾಗಿದೆ ಎಂದು ಹೇಳಿದರು.
ಸಣ್ಣ ಕೈಗಾರಿಕಾ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಉದ್ಯಮ ಸ್ಥಾಪನೆಗೆ ಬೆಂಗಳೂರಿನತ್ತ ಮುಖ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರ ನೀಡಬೇಕಾಗಿದೆ. ಬೆಂಗಳೂರಿನಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ಇಲ್ಲದಂತಹ ಸ್ಥಿತಿಯಿದ್ದು, ಕೈಗಾರಿಕೋದ್ಯಮಗಳು ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದಾಗಬೇಕು. ಸರ್ಕಾರ ಅದಕ್ಕೆ ಬೇಕಾದ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ನಂತರ ಜರುಗಿದ ಗೋಷ್ಠಿಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ ಕೈಗಾರಿಕೆ ನೀತಿ, ಹೂಡಿಕೆಗೆ ಹೊಸ ಅವಕಾಶಗಳ ಕುರಿತು, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ಗೌಡ ಕೌಶಲ್ಯ ತರಬೇತಿ ಕುರಿತು ಮಾಹಿತಿ ನೀಡಿದರು.
ಎ್ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ಶರಣಗೌಡ ಬಯ್ಯಪುರ, ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ, ಎ್ಕೆಸಿಸಿಐ ಪದಾಕಾರಿಗಳಾದ ರಮೇಶಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಎಸ್.ಕಮಲಕುಮಾರ ಉಪಸ್ಥಿತರಿದ್ದರು.