ಜಿಪಂ ಸಿಇಒ ರಾಹುಲ್ ಶಿಂಧೆ 
ಜಿಲ್ಲೆ

ಸಮನ್ವತೆಯಿಂದ ಕಾರ್ಯನಿರ್ವಹಿಸಿ

Vijayapura - Desk - Parashuram Keri

ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಕೇಂದ್ರದಲ್ಲಿ ನಡೆದ ಶಾಲೆ ಶಿಕ್ಷಣ ಇಲಾಖೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಗೃಹ ವ್ಯವಸ್ಥೆ ಕಲ್ಪಿಸಬೇಕು. 4ನೇ ತರಗತಿಯ ನಂತರದ ಎಲ್ಲ ಮಕ್ಕಳಿಗೂ ಬೆಂಚ್ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದರು.

ಕೆಲ ಶಾಲೆಗಳಲ್ಲಿ ಬೆಂಚ್ ಮತ್ತು ಚಿಕ್ಕ ಆಸನಗಳನ್ನು ವಿತರಿಸಲು ಪಿಡಿಓಗಳಿಗೆ ಸೂಚಿಸಿದ ಅವರು, ಹಲವು ಕಡೆ ಪಿಡಿಒಗಳು ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಆಗದೇ ಇರುವುದು ತಮ್ಮ ಗಮನಕ್ಕೆ ಬಂದಿದೆ ಎಂದರು.

ಅಂಗನವಾಡಿ ಮೇಲ್ವಿಚಾರಕರು ಮತ್ತು ಪಿಡಿಒಗಳು ಜಂಟಿಯಾಗಿ ಮೇಲುಸ್ತುವಾರಿ ನೋಡಿಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಅಧಿಕಾರಿ ಮೇಲ್ವಿಚಾರಣೆ ಮಾಡಬೇಕು. ಮಕ್ಕಳಲ್ಲಿ ಶಿಸ್ತು, ಸಕಾರಾತ್ಮಕ ಮತ್ತು ರಚನಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಿಗೆ ಶೌಚಗೃಹ ಮತ್ತು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸುವುದಕ್ಕೆ ಆದ್ಯತೆ ನೀಡಬೇಕು ಎಂದರು.

ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಡಿಡಿಪಿಐ ಎನ್.ಎಚ್. ನಾಗೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.