ಬಾಗೇಪಲ್ಲಿ : ಪಟ್ಟಣದ ಅಭಿವೃದ್ಧಿ, ಮೂಲಸೌಲಭ್ಯ, ಕುಂದುಕೊರತೆಗಳ ಕುರಿತು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಚರ್ಚಿಸಲು ಪುರಸಭೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ, ಪುರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪುರಸಭೆ, ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ವಿವಿಧ ವಾರ್ಡ್‌ಗಳಿಗೆ ಭೇಟಿ ಸಮಸ್ಯೆ ಆಲಿಸುವ ಗುಡ್ ಮಾರ್ನಿಂಗ್ ಬಾಗೇಪಲ್ಲಿ ಕಾರ್ಯಕ್ರಮಕ್ಕೆ ಅಣಿಯಾಗಿದೆ.
ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ರಾಜಕಾರಣವನ್ನು ಬದಿಗೊತ್ತಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒಮ್ಮತದಿಂದ ಪುರಸಭೆಯೊಂದಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.
ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್‌ಗಳಿದ್ದು ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಚುನಾಯಿತರಾಗಿದ್ದಾರೆ. ಆದರೆ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು, ಸ್ವಚ್ಛತೆ ಸೇರಿ ಮೂಲ ಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಸದಸ್ಯರು ರಾಜಕೀಯ ಹಸ್ತಕ್ಷೇಪ ಮಾಡದೆ ಅಭಿವೃದ್ಧಿ ಆದ್ಯತೆ ನೀಡಬೇಕೆಂದರು.
ವಾರದ ಪ್ರತಿ ಮಂಗಳವಾರ ಮತ್ತು ಶುಕ್ರವಾರ ವಾರ್ಡ್‌ಗಳಿಗೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜತೆಗೆ ಮೂಲ ಸೌಕರ್ಯ ಕಲ್ಪಿಸುವ ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆಯಿತ್ತರು.
ಕರೊನಾ ಎರಡನೇ ಅಲೆಯಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ, ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಪ್ರತಿಯೊಬ್ಬರು ಆರೋಗ್ಯ ಇಲಾಖೆ ನಿಯಮಗಳನ್ನು ಪಾಲಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಸಲಹೆ ನೀಡಿದರು.
ಪುರಸಭೆ ಸದಸ್ಯೆ ಸರೋಜಮ್ಮ ರಾಜು, ಆರೋಗ್ಯ ನಿರೀಕ್ಷಕ ಮುರಳಿ, ಸಿಬ್ಬಂದಿ ಅಮರ್, ಆರೋಗ್ಯ ಇಲಾಖೆ ಮೇಲ್ವಿಚಾರಕಿ ಸರಸ್ವತಮ್ಮ, ಸಹಾಯಕಿಯರಾದ ಈಶ್ವರಮ್ಮ, ನಿರ್ಮಲಮ್ಮ ಮತ್ತಿತರರು ಇದ್ದರು.