ಬೆಟ್ಟದಪುರ: ಸಾರ್ವಜನಿಕರು ತಾಲೂಕಿನ ಯಾವುದೇ ಇಲಾಖೆಗೆ ಅರ್ಜಿ ಕೊಟ್ಟು ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ ಅಥವಾ ಅಧಿಕಾರಿಗಳು ಸ್ಪಂದಿಸದಿದ್ದರೆ ನೇರವಾಗಿ ನನಗೆ ಕರೆ ಮಾಡಿ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಬೆಟ್ಟದಪುರ ಸಮೀಪದ ಕಿತ್ತೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಸಮಸ್ಯೆಯ ಬಗ್ಗೆ ನೇರವಾಗಿ ನನ್ನ ಗಮನಕ್ಕೆ ತಂದರೆ ನಾನು ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮಕೈಗೊಳ್ಳುತ್ತೇನೆ ಎಂದರು.
ಪಿರಿಯಾಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಕಷ್ಟದಲ್ಲಿರುವ ಅವರ ಕುಟುಂಬಗಳಿಗೆ ಸರ್ಕಾರದಿಂದ ಅನುದಾನವನ್ನು ತರುವುದಕ್ಕೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಬೇಕು. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಿದ ಬಳಿಕವೇ ಆದೇಶವಾಗುವುದು. ಒಬ್ಬ ಜನಪ್ರತಿನಿಧಿ ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಿದರೆ ಮಾತ್ರ ಸಮಸ್ಯೆಗಳು ಬಗೆಹರಿಸಲು ಸಾಧ್ಯ ಎಂದರು.
ತಹಸೀಲ್ದಾರ್ ಎಂ.ಎಸ್.ಯದುಗಿರೀಶ್ ಮಾತನಾಡಿ, ಬೆಟ್ಟದಪುರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ 4700ಕ್ಕೂ ಹೆಚ್ಚಿನ ಕುಟುಂಬಗಳು ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸಾರ್ವಜನಿಕರು ಅರ್ಜಿ ನೀಡಬೇಕು ಎಂದರು.
ತಾಲೂಕು ಪಂಚಾಯಿತಿ ಇಒ ಸಿ.ಆರ್.ಕೃಷ್ಣಕುಮಾರ್ ಮಾತನಾಡಿ, ಪಂಚಾಯಿತಿಯಲ್ಲಿ ರೈತರು ಸೇರಿದಂತೆ ಪ್ರತಿಯೊಬ್ಬರಿಗೂ ಅನುಕೂಲವಾಗುವ ಯೋಜನೆಗಳು ಸಾಕಷ್ಟಿದ್ದು, ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು. ಹಸು ಸಾಕಣೆಗೆ ದನದ ಕೊಟ್ಟಿಗೆ ನಿರ್ಮಾಣ ಮಾಡುವುದಕ್ಕೆ 57000 ರೂ. ಅನುದಾನವನ್ನು ನೀಡಲಾಗುತ್ತಿದೆ. ಬೇರೆ ಬೇರೆ ಯೋಜನೆಗಳ ಸೌಲಭ್ಯ ಪಡೆಯಲು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪಿಂಚಣಿ ಯೋಜನೆಯ ಆದೇಶ ಪತ್ರ ಸೇರಿದಂತೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. 60ಕ್ಕೂ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ವಿವಿಧ ಇಲಾಖೆಗೆ ಸಾರ್ವಜನಿಕರು ಅರ್ಜಿ ನೀಡಿದರು. ಆರೋಗ್ಯ ಇಲಾಖೆ ಆಯೋಜಿಸಿದ ಆರೋಗ್ಯ ಶಿಬಿರದಲ್ಲಿ ನೂರಕ್ಕೂ ಹೆಚ್ಚಿನ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಏಳನೇ ವೇತನ ಆಯೋಗವನ್ನು ಜಾರಿಗೆ ತರುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಬೇಕು ಎಂದು ಶಾಸಕರಿಗೆ ತಾಲೂಕು ಮಟ್ಟದ ಅಧಿಕಾರಿಗಳು ಇದೆ ವೇಳೆ ಮನವಿ ಮಾಡಿದರು.
ಅಧಿಕಾರಿಗಳಿಗೆ ತರಾಟೆ: ಸಾರ್ವಜನಿಕರಿಂದ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಂದ ಅರ್ಜಿಗಳನ್ನು ಶಾಸಕ ಕೆ.ಮಹದೇವ್ ವೇದಿಕೆಯಲ್ಲಿ ಓದಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ಏಕೆ ಬಗೆಹರಿದಿಲ್ಲ, ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಖಡಕ್ ಸೂಚನೆ ನೀಡಿದರು.
ಕಿತ್ತೂರು ಗ್ರಾ.ಪಂ. ಅಧ್ಯಕ್ಷೆ ನಳಿನಿ, ಉಪಾಧ್ಯಕ್ಷೆ ವೀಣಾ, ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್, ತಾಲೂಕು ಅರೋಗ್ಯ ಅಧಿಕಾರಿ ಡಾ.ಶರತ್‌ಬಾಬು, ಬಿಇಒ ಬಸವರಾಜು, ಲೋಕೋಪಯೋಗಿ ಇಲಾಖೆ ಎಇಇ ವೆಂಕಟೇಶ್, ಬಸ್ ಡಿಪೋ ವ್ಯವಸ್ಥಾಪಕ ದರ್ಶನ್, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಸೋಮಯ್ಯ, ಸಿಡಿಪಿಒ ಮಮತಾ, ಉಪ ತಹಸೀಲ್ದಾರ್ ಶಶಿಧರ್, ಕಂದಾಯ ನಿರೀಕ್ಷಕ ಆನಂದ್, ಮುಖಂಡರಾದ ಕೆ.ಎಸ್.ಮಂಜುನಾಥ್, ಗಗನ್, ದಿನೇಶ್, ಸತೀಶ್, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.