ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜನತೆ ಮೂಲ ಸೌಕರ್ಯಗಳ ಸಮಸ್ಯೆಗಳ ನಡುವೆ ಬದುಕು ಸಾಗಿಸುತ್ತಿದ್ದಾರೆ ಎಂಬ ಸತ್ಯ ಕ್ಷೇತ್ರಾದ್ಯಂತ ನಡೆಸಿದ ಪಾದಯಾತ್ರೆಯಿಂದ ತಿಳಿದು ಬಂತು ಎಂದು ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
22 ದಿನಗಳಲ್ಲಿ 400 ಕಿ.ಮೀ ಪಾದಯಾತ್ರೆ ಮಾಡಲಾಗಿದೆ. 35 ಗ್ರಾಮ ಪಂಚಾಯಿತಿ ವ್ಯಾಪ್ತಿಯ 190 ಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮೀಣ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಲಾಯಿತು. ಈ ಸಂದರ್ಭ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಶಾಲೆ, ವಿದ್ಯುತ್, ಸಾರಿಗೆ ಹೀಗೆ ಒಂದಲ್ಲ ಒಂದು ಸಮಸ್ಯೆ ಜನರನ್ನು ಬಾಧಿಸುತ್ತಿದೆ. ಹೀಗಾಗಿ ಗ್ರಾಮೀಣ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಆಲೋಚನೆ ಮಾಡಬೇಕಾದ ಅಗತ್ಯ ಇದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರವಿದ್ದು, ಇರುವ ಅಧಿಕಾರ ಬಳಸಿಕೊಂಡು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಯಾವ ರೀತಿ ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು ಎಂಬುದರ ಬಗ್ಗೆ ಜನರಿಗೆ ತಿಳಿಸಬೇಕು ಎಂದರು.
ಸಂಸದರು ಬೆಂಬಲಿಸುವ ವಿಶ್ವಾಸವಿದೆ: 25 ದಿನಗಳಿಂದ ನಿರಂತರವಾಗಿ ಪಾದಯಾತ್ರೆಯಲ್ಲಿ ಸಕ್ರಿಯವಾಗಿದ್ದ ಕಾರಣ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ ನಂತರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಸಂಸದರು ನಮಗೆ ಬೆಂಬಲ ವ್ಯಕ್ತಪಡಿಸಿ ಪ್ರಚಾರ ಮಾಡುತ್ತಾರೆ ಎಂಬ ವಿಶ್ವಾಸವಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತುಕತೆ ನಡೆಸಲಾಗುವುದು. ರೈತಸಂಘ ಬೆಂಬಲಿಸುವ ಬಗ್ಗೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿಲ್ಲ. ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ ಎಂದು ವಿವರಿಸಿದರು.
ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ, ಅಕ್ಷತಾ ಪುಟ್ಟಣ್ಣಯ್ಯ, ಸ್ಮಿತಾ ಪುಟ್ಟಣ್ಣಯ್ಯ, ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವಿಜಯಕುಮಾರ್, ಮಾಜಿ ಅಧ್ಯಕ್ಷ ಚಿಕ್ಕಾಡೆಎ ಹರೀಶ್, ಎಣ್ಣೆಹೊಳೆಕೊಪ್ಪಲು ವೈ.ಪಿ.ಮಂಜು, ವೈ.ಜಿ.ರಘು ಸುದ್ದಿಗೋಷ್ಠಿಯಲ್ಲಿದ್ದರು.