ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸುವ ಸಂಬAಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು. 
ಜಿಲ್ಲೆ

ಸಮೀಕ್ಷಾ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸುವ ಸಂಬAಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ತಾಲೂಕಿನ ತಹಸೀಲ್ದಾರ್, ತಾಪಂ ಇಒ ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಸಮೀಕ್ಷೆಯ ಮೇಲ್ವೆಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸುವಂತೆ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ೨,೫೩,೬೫೧ ಪರಿಶಿಷ್ಟ ಜಾತಿಯ ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು ೬೦೦ ರಿಂದ ೭೦೦ ಶಿಕ್ಷಕರ ಅವಶ್ಯಕತೆಯಿದೆ. ಸದರಿ ಶಿಕ್ಷಕರಿಗೆ ಸಹಾಯಕರಾಗಿ ಅಲ್ಲಿನ ಅಂಗನವಾಡಿ ಕಾರ್ಯಕಾರ್ತೆಯರನ್ನು ನಿಯೋಜಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ವಯ ಎಲ್ಲ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿ ಗೊಳಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.