ಚಿತ್ರದುರ್ಗ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ 5 ಗ್ಯಾರಂಟಿ ಜಾರಿಗೊಳಿಸಿದ್ದು, ಇವು ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲೂಕಾಡಳಿತ, ತಾಪಂ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ತಾಲೂಕಿನ ತುರುವನೂರು ಗ್ರಾಮದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದರು.
ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿ ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರಿಗೆ ತಲುಪಿಸುತ್ತಿದ್ದೇವೆ. ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಇಲ್ಲಿ ಗೋಶಾಲೆ ಆರಂಭಿಸಲಾಗಿದೆ ಎಂದರು.
ತಹಸೀಲ್ದಾರ್ ಡಾ.ನಾಗವೇಣಿ, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಧಾ, ಗ್ರಾಪಂ ಅಧ್ಯಕ್ಷೆ ದೀಪಾ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡರಾದ ಸಂತೋಷ, ಕಾಕಿ ಹನುಮಂತರೆಡ್ಡಿ, ವಿವೇಕಪ್ಪ, ನಾಗರಾಜ್, ಪವನ್‌ಕುಮಾರ್, ಡಿ.ಆರ್.ಮಂಜುನಾಥ್ ಇತರರಿದ್ದರು.