ನಾಪೋಕ್ಲು: ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಎಸ್‌ಸಿ, ಎಸ್‌ಟಿ ಜನಾಂಗದವರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಡಾ.ಮಂತರ್‌ಗೌಡ ಸಲಹೆ ನೀಡಿದರು.
ಮಡಿಕೇರಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಡಿಕೇರಿ ಬ್ಲಾಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮುಖಂಡರು, ಕಾರ್ಯಕರ್ತರ ಜಿಲ್ಲಾಮಟ್ಟದ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ನಿವೇಶನರಹಿತ ಬಡ ಕೂಲಿ ಕಾರ್ಮಿಕ ಎಸ್‌ಸಿ, ಎಸ್‌ಟಿ ಜನಾಂಗದ ಕುಟುಂಬಗಳಿಗೆ ನಿವೇಶನ ಒದಗಿಸುವ ಯೋಜನೆ ಮತ್ತು ಕಾಲನಿಗಳಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರಲ್ಲಿ ಹೆಚ್ಚಿನ ಅನುದಾನದ ಬಗ್ಗೆ ಚರ್ಚಿಸುವೆ. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯವನ್ನು ಹೊರತುಪಡಿಸಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಅತಿ ಮುಖ್ಯ ಎಂದರು.
ಎಸ್‌ಸಿ, ಎಸ್‌ಟಿ ಜನಾಂಗದ ಪರವಾದ ಕಾನೂನಾತ್ಮಕ ಹೋರಾಟಗಳು ಮತ್ತಷ್ಟು ನಡೆಯಲಿ ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಮತ್ತು ಎಲ್ಲ ಬಡವರ ಪರವಾದ ಏಳಿಗೆಗೆ ಸದಾ ಬದ್ಧವಾಗಿದೆ ಎಂದರು.
ಕೆಪಿಸಿಸಿ ಜಿಲ್ಲಾ ಸದಸ್ಯರಾದ ನಂದಕುಮಾರ್ ಮಾತನಾಡಿ, ಇಂದು ಕಾಂಗ್ರೆಸ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಜನರಿಗೆ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಜನಾಂಗದವರು ಶೋಚನೀಯ ಸ್ಥಿತಿಯಲ್ಲಿದ್ದು, ಅವರ ಜೀವನಾಭಿವೃದ್ಧಿ ಅತಿ ಮುಖ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಜನಾಂಗದ ಸುಸ್ಥಿರಾಭಿವೃದ್ಧಿಗೆ ಅನುದಾನವನ್ನು ಹೆಚ್ಚಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಇ. ಸುರೇಶ್ ಅಭಿಪ್ರಾಯಪಟ್ಟರು.
ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಮುಖಂಡರಾದ ಬಹುಜನ ಕಾರ್ಮಿಕ ಸಂಘಟನೆಯ ಕೆ.ಮೊಣ್ಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ನಿವೇಶನ ರಹಿತ ಬಡ ಕೂಲಿ ಕಾರ್ಮಿಕ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಇದ್ದು ಅವರಿಗೆ ನಿವೇಶನ ಹಕ್ಕುಪತ್ರ ನೀಡಬೇಕು ಮತ್ತು ಎಸ್‌ಸಿ, ಎಸ್‌ಟಿ, ಕಾಲನಿಗಳಿಗೆ ಹೆಚ್ಚಿನ ಅನುದಾನವನ್ನು ತರಿಸಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಶಾಶ್ವತ ನೆಲೆ ಕಲ್ಪಿಸಿಕೊಡುವ ಜವಾಬ್ದಾರಿ ಕಾಂಗ್ರೆಸ್ ಸರ್ಕಾರಕ್ಕೆ ಇದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಾದ ಮೋಹನ್ ಮೌರ್ಯ ಮಾತನಾಡಿ, ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಸಮಸ್ಯೆಗಳು ಸಾಕಷ್ಟಿವೆ. ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆಗಳಿದ್ದು, ಉದ್ಯೋಗ ಕಲ್ಪಿಸುವಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಯ ಎಸ್‌ಸಿ, ಎಸ್‌ಟಿ ಮತ್ತು ಇತರ ಯುವ ಜನರಿಗೆ ಹೆಚ್ಚಿನದಾಗಿ ಸಿಗುವಂತೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ನಗರದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಎನ್.ಮುದ್ದುರಾಜ್, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಹಂಸ, ಜಿಪಂ ಮಾಜಿ ಸದಸ್ಯ ಪಾಪು ಸಣ್ಣಯ್ಯ, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ, ಎಸ್‌ಸಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಬ್ರಮಣಿ, ಚಂದ್ರಶೇಖರ್, ಮಂಜುನಾಥ್, ಮಡಿಕೇರಿ ನಗರದ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮುಕ್ಕಾಟಿರ ಸಂದೀಪ್, ನಂದಕುಮಾರ್, ಎಸ್‌ಸಿ, ಎಸ್‌ಟಿ ಮುಖಂಡರಾದ ಭೋಜಣ್ಣ, ರಘು ಇತರರು ಪಾಲ್ಗೊಂಡಿದ್ದರು.
ಸಭೆಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.