ಹನೂರು: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಂಗಳವಾರ ತಾಲೂಕು ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಕಾರ್ಮಿಕರ ಕಾಯ್ದೆಗಳು ಮತ್ತು ಯೋಜನೆಗಳ ಅನುಷ್ಠಾನ ಸಂಬಂಧ ಕಾರ್ಮಿಕರಿಗಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.
ಸಂವಿಧಾನ ಜಾರಿಗೊಂಡ ಬಳಿಕ ದೇಶದಲ್ಲಿ ಕಾನೂನನ್ನು ರೂಪಿಸಿ ಅಡಳಿತ ನಡೆಸಲಾಗುತ್ತಿದೆ. ಹಾಗೆಯೇ ವಿವಿಧ ಇಲಾಖೆಗಳ ಮೂಲಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಸವಲತ್ತುಗಳನ್ನು ನೀಡುತ್ತಿದೆ. ಆದರೆ ಕೆಲವರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಅರಿವು ಇರುವುದಿಲ್ಲ. ಇದರಿಂದ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಈ ದೆಸೆಯಲ್ಲಿ ಕಾರ್ಯಾಗಾರ ಆಯೋಜಿಸಿರುವುದು ಕಾರ್ಮಿಕರಿಗೆ ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಸರ್ಕಾರದಿಂದ ಸವಲತ್ತುಗಳನ್ನು ಪಡೆಯುವಂತಾಗಬೇಕು. ಇದರಿಂದ ಜೀವನ ಮಟ್ಟ ಸುಧಾರಣೆಯ ಜತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ಸರ್ಕಾರ ಮಕ್ಕಳಿಗೆ ಹಲವು ಸವಲತುಗಳನ್ನು ನೀಡುವುದರ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಆದ್ದರಿಂದ ಪಾಲಕರು ಈ ಬಗ್ಗೆ ಮನದಟ್ಟು ಮಾಡಿಕೊಂಡು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಕಾರಣಕ್ಕೂ 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ದೂಡಬಾರದು ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ಮಾತನಾಡಿ, ವಾಣಿಜ್ಯ ಮಳಿಗೆಗಳಲ್ಲಿ ಕೆಲವು ಮಾಲೀಕರು ಕಾರ್ಮಿಕರನ್ನು ನೇಮಿಸಿಕೊಳ್ಳುವಾಗ ಕಾರ್ಮಿಕ ಇಲಾಖೆಯ ಕಾಯ್ದೆಯನ್ನು ತಿಳಿದುಕೊಂಡಿರುವುದಿಲ್ಲ. ಜತೆಗೆ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳ ಬಗ್ಗೆ ಅರಿವು ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಾಯ್ದೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸುವ ಸಲುವಾಗಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಮಿಕರಿಗೆ ಅನುಕೂಲ ಕಲಿಸುವ ನಿಟ್ಟಿನಲ್ಲಿ ಮಂಡಳಿಗಳನ್ನು ರಚನೆ ಮಾಡಲಾಗಿದೆ. ಅಸಂಘಟಿತ ವಲಯಗಳಲ್ಲಿ ದುಡಿಯುವ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯನ್ನು ರೂಪಿಸಲಾಗಿದೆ. ಸ್ಮಾರ್ಟ್‌ಕಾರ್ಡ್ ಸೇರಿದಂತೆ ಇನ್ನು ಹಲವು ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಮಹೇಶ್, ಕಟ್ಟಡ ಕಾರ್ಮಿಕ ಅಧಿಕಾರಿ ರಾಜೇಶ್, ತಾಲೂಕು ಕಾರ್ಮಿಕ ನಿರೀಕ್ಷಕ ಪ್ರಸಾದ್ ಮತ್ತಿತರರು ಹಾಜರಿದ್ದರು.