ಜಿಲ್ಲೆ

ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ತಪ್ಪದೇ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.

ಇಲ್ಲಿಯ ಮಿನಿ ವಿಧಾನಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಸರ್ಕಾರದ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಶಿಕ್ಷಣ, ಆರೋಗ್ಯ, ಆಹಾರ, ಕೃಷಿ, ಕುಡಿಯುವ ನೀರು, ಬೀದಿ ದೀಪ, ಪರಿಸರ, ಮಕ್ಕಳ ಅಭಿವೃದ್ಧಿ ಹಾಗೂ ಸರ್ಕಾರಿ ಕಟ್ಟಡಗಳ ದುರಸ್ತಿ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಪಡಿಸಬೇಕು ಎಂದು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಜನರ ಮನೆ ಮನೆಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಪಂಚಾಯಿತಿಗೆ ಹಸ್ತಾಂತರ ಮಾಡಿಕೊಳ್ಳಲಾಗುವುದು. ಹಳ್ಯಾಳ ಮತ್ತು ಸುಳ್ಳದಲ್ಲಿ ಅಳವಡಿಸಲಾದ ಕುಡಿಯುವ ನೀರಿನ ಪೈಪ್​ಗಳು ಅಲ್ಲಲ್ಲಿ ಸೋರಿಕೆ ಆಗುತ್ತಿವೆ. ಕಳಪೆ ಟ್ಯಾಪ್ ಅಳವಡಿಸಲಾಗಿದೆ. ಫಲಾನುಭವಿಗಳ ಮನೆ ವರೆಗೂ ನೀರು ಬರುತ್ತಿಲ್ಲ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಾರಣ ಸಮರ್ಪಕ ನೀರು ಪೂರೈಕೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗೆ ಸೂಚಿಸಿದರು.

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೂ ಮಕ್ಕಳ ದಾಖಲಾತಿ ಸಂಖ್ಯೆ ಏಕೆ ಕಡಿಮೆ ಆಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಮಕ್ಕಳ ಪ್ರವೇಶಾತಿ ಹೆಚ್ಚಿಸಲು ಮುತುವರ್ಜಿ ವಹಿಸಿ ಕೆಲಸ ಮಾಡಿ ಎಂದು ಕ್ಷೇತ್ರ ಶಿಕ್ಷಣಾಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ಹಿನ್ನೆಯಲ್ಲಿ ಯಾವುದೇ ಅನಾಹುತಗಳು ಆಗದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯುತ್ ಲೈನ್ ಸಮಸ್ಯೆಗಳಿದ್ದರೆ, ಕಂಬಗಳ ದುರಸ್ತಿಗಳಿದ್ದರೆ ಹೆಸ್ಕಾಂ ಅಧಿಕಾರಿಗಳು ಸಂರ್ಪಸಿ ಸರಿಪಡಿಸಿಕೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ರೈತರಿಗೆ ರಸಗೊಬ್ಬರ ಮತ್ತು ಬೀಜಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕೆಂದು ಕೃಷಿ ಇಲಾಖೆಗೆ ಸೂಚಿಸಿದರು.

ಹುಬ್ಬಳ್ಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಮಚಂದ್ರ ಹೊಸಮನಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.