ಹಾಸನ: ಇಲಾಖೆಯ ಸಮೀಕ್ಷೆಯ ಪ್ರಕಾರ ಶೇ. 40 ರಷ್ಟು ಮತದಾರರು ಇನ್ನೂ ಮತದಾರರ ಪಟ್ಟಿಗೆ ನೋಂದಣಿಯಾಗದಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುನೀತ್ ಅಭಿಪ್ರಾಯಪಟ್ಟರು.
ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು - ಸ್ವಾಯತ್ತ ಕಾಲೇಜಿನ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮತದಾರರ ಗುರುತಿನ ಚೀಟಿಯನ್ನು ಪಡೆಯಲು ಯಾವ ನೀತಿ ನಿಯಮಗಳನ್ನು ಪಾಲಿಸಬೇಕು ಮತ್ತು ಅದರಲ್ಲಿ ಲೋಷಗಳು ಕಂಡು ಬಂದರೆ ಅದನ್ನು ಸರಿಪಡಿಸುವುದರ ಕುರಿತು ಮಾಹಿತಿ ನೀಡಿದರು. ಆ.24 ರೊಳಗೆ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಸೇರಿಕೊಳ್ಳುವಂತೆ ಮತ್ತು ಗುರುತಿನ ಚೀಟಿ ತೆಗೆದುಕೊಳ್ಳುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಾ.ಎಂ.ಬಿ. ಇರ್ಷಾದ್, ಪರೀಕ್ಷಾ ನಿಯಂತ್ರಕ ಡಾ. ಕೆ.ಡಿ. ಮುರುಳೀಧರ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಕೆ.ವಿ. ಪಾರ್ಥೇಶ್, ಕನ್ನಡ ವಿಭಾಗದ ಅಧ್ಯಾಪಕ ಡಾ. ದಿನೇಶ್ ಉಪಸ್ಥಿತರಿದ್ದು, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ರಶ್ಮಿ ಎ.ವಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಹರೀಶ್, ರಾಮಚಂದ್ರು, ಲೋಕೇಶ್ ಅವರನ್ನು ಒಳಗೊಂಡಂತೆ ವಿದ್ಯಾರ್ಥಿಗಳು ಹಾಜರಿದ್ದರು.