ಹಾಸನ: ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಿಲುವನ್ನು ವಿರೋಧಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗುರುವಾರ ನಗರದ ುಹಾವೀರ ಸರ್ಕಲ್ ಬಳಿ, ಹಣ್ಣು, ಹೂವಿನ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಂದ ಸಂಯೋಜನೆ ಹೆಸರಿನಲ್ಲಿ ಆರು ಸಾವಿರಕ್ಕೂ ಹೆಚ್ಚು ಜನರಿಂದ ಸಹಿ ಸಂಗ್ರಹಿಸಲಾಯಿತು.
ಈ ವೇಳೆ ಸಂಘಟನೆ ಜಿಲ್ಲಾ ಸಂಚಾಲಕಿ ಚೈತ್ರಾ ಅವರು ಮಾತನಾಡಿ, ರಾಜ್ಯ ಸರ್ಕಾರ ಕಡಿಮೆ ದಾಖಲಾತಿ ಹೆಸರಿನಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಅದರಲ್ಲಿ ಹಾಸನದಲ್ಲಿ ಹತ್ತಕ್ಕಿಂತ ಕಡಿಮೆ ಇರುವ 604 ಶಾಲೆಗಳಿವೆ. ಸರ್ಕಾರಿ ಶಾಲೆಗಳು ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣ. ಈ ಶಾಲೆಗಳಿಗೆ ಶಿಕ್ಷಣದ ಕನಸು ಹೊತ್ತು ಬರುವವರು ಬಹುತೇಕ ಬಡವರ, ರೈತ-ಕಾರ್ಮಿಕರ ಮಕ್ಕಳು. ಅಂತಹ ಸರ್ಕಾರಿ ಶಾಲೆಗಳ ಇಂದಿನ ಪರಿಸ್ಥಿತಿ ಬಹಳ ಶೋಚನೀಯವಾಗಿದೆ ಎಂದರು.
ರಾಜ್ಯದಲ್ಲಿ 6000ಕ್ಕೂ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 3,500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯವಾದ ಶೌಚಾಲಯ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ಚಾವಣಿಗಳು ಸೋರುತ್ತಿವೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 29 ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಗೊಂಡು ಬೀಳುವ ಹಂತದಲ್ಲಿವೆ ಎಂದು ಹೇಳಿದರು.
ರಾಜ್ಯದ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಯಾವ ಗಂಭೀರ ಸಮಸ್ಯೆಗಳನ್ನು ಪರಿಹರಿಸದೆ, ಕಡಿಮೆ ದಾಖಲಾತಿ ಹೆಸರಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆ ಇರುವ ಶಾಲೆಗಳನ್ನು ಮುಚ್ಚುವ ಬದಲು ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಅಭಿವೃದ್ಧಿಪಡಿಸಿ ರಕ್ಷಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಸುಷ್ಮಾ , ಶ್ಯಾಮಲಾ, ವಿದ್ಯಾರ್ಥಿಗಳಾದ ಮೋಹನ್, ನಂದಶ್ರೀ, ಪಲ್ಲವಿ, ನಂದಿತಾ ಇದ್ದರು.