ಜಿಲ್ಲೆ

ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ

ಶಿಡ್ಲಘಟ್ಟ : ರಾಜ್ಯದಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸಿ ಸೌಲಭ್ಯಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಕೃಷಿ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ 2020-21ನೇ ಸಾಲಿನ ಮೊಬೈಲ್ ಆೃಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ಜಾಥಾಗೆ ಹಸಿರು ನಿಶಾನೆ ತೋರಿ ಮಾತನಾಡಿದರು.

ಸರ್ಕಾರ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅದರ ಕುರಿತು ವ್ಯಾಪಕ ಪ್ರಚಾರ ಮತ್ತು ಮಾಹಿತಿ ಕೊರತೆಯಿಂದ ಅರ್ಹ ರೈತರಿಗೆ ಸೌಲಭ್ಯಗಳು ಲಭಿಸುತ್ತಿಲ್ಲ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ, ಬೆಳೆ ಸಮೀಕ್ಷೆಯಿಂದ ಆಗುವ ಪ್ರಯೋಜನ ಹಾಗೂ ಅನುಷ್ಠಾನದ ಕ್ರಮಗಳ ಕುರಿತು ಮಾಹಿತಿ ನೀಡಿದರು.ತಹಸೀಲ್ದಾರ್ ಕೆ.ಅರುಂಧತಿ, ಕೃಷಿ ಇಲಾಖೆ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ, ಕೃಷಿ ಇಲಾಖೆ ಸಿಬ್ಬಂದಿ ಹಾಜರಿದ್ದರು.