ಜಿಲ್ಲೆ

ಸಹಕಾರ ಸಂಘಗಳಿಂದ ರೈತರ ಪ್ರಗತಿ ಸಾಧ್ಯ

ಮದ್ದೂರು: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಬ್ಯಾಂಕ್‌ಗಳ ಸಶಕ್ತೀಕರಣಕ್ಕೆ ಡಿಸಿಸಿ ಬ್ಯಾಂಕ್ ಬದ್ಧವಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ ಹೇಳಿದರು.
ತಾಲೂಕಿನ ಬೆಸಗರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರ ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಂಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. 80 ಲಕ್ಷ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗಿದೆ. ಇದರಿಂದ ಸಹಕಾರ ಸಂಘ ಆರ್ಥಿಕವಾಗಿ ಸಬಲವಾಗಲಿದೆ ಎಂದರು.
ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮಾತನಾಡಿ, ಬೆಸಗರಹಳ್ಳಿ ಸಹಕಾರ ಸಂಘದಲ್ಲಿ ಹೆಚ್ಚು ಷೇರುದಾರರಿದ್ದು ಅವರಿಗೆ ನೀಡುತ್ತಿರುವ ಸೌಲಭ್ಯಗಳು ಸಾಲದು. ಡಿಸಿಸಿ ಬ್ಯಾಂಕ್ ವತಿಯಿಂದ ಬೆಸಗರಹಳ್ಳಿ ಸಹಕಾರ ಸಂಘದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದರು.