ಬಾಗಲಕೋಟೆ ನಗರದ ಕಲಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.  
ಜಿಲ್ಲೆ

ಸಾಮಾಜಿಕ ಕಾಂತ್ರಿಯ ಹರಿಕಾರ ಡಿ.ದೇವಾರಾಜ ಅರಸು

ಬಾಗಲಕೋಟೆ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ದುರ್ಬಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ನವನಗರದ ಕಲಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇವರಾಜ ಅರಸು ಹಿಂದುಳಿದವರ ಸರ್ವತೋಮುಖ ಅಭಿವೃದ್ಧಿಗಾಗಿ ಹತ್ತು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡು ದುರ್ಬಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ್ದಾರೆ ಎಂದರು.

ಮೈಸೂರನ್ನು ಕರ್ನಾಟಕ ಎಂಬ ನಾಮಕರಣ ಮಾಡಿದವರು. ಅವರ ಕಾಲದಲ್ಲಿ ಕೂಲಿ ಮಾಡುವವರು ಭೂ ಮಾಲೀಕರಾದರು. ಬಡವರು ಮತ್ತು ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡಿದರು. ಸಣ್ಣ ಸಣ್ಣ ಸಮುದಾಯದವರನ್ನು ರಾಜಕೀಯದಲ್ಲಿ ಬರುವಂತೆ ಮಾಡಿದ ಫಲವಾಗಿ ಇಂದು ಅನೇಕರು ಮುಖ್ಯಮಂತ್ರಿಗಳ ಹುದ್ದೆ ಅಲಂಕರಿಸುವಂತಾಗಿದೆ. ಅರಸು ಅವರ ಕಾರ್ಯ ಇಂದಿನ ರಾಜಕೀಯದವರಿಗೆ ನೀತಿ ಪಾಠವಾಗಿದ್ದು, ಅವರ ಆಡಳಿತವನ್ನು ನಾವೆಲ್ಲರೂ ಅನುಸರಿಸುವಂತಾಗಿದೆ ಎಂದು ತಿಳಿಸಿದರು.

ಇಂತಹ ಮಹಾನ್ ನಾಯಕರ ಇತಿಹಾಸವನ್ನು ಇಂದಿನ ಯುವ ಪೀಳಿಗೆ ಅನುಸರಿಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಒಂದು ದಿನವಾದರೂ ಡಿ.ದೇವರಾಜ ಅರಸು ರಂತಹ ಮಹಾನ್ ವ್ಯಕ್ತಿಗಳ ಇತಿಹಾಸ ಸಾರುವ ಪುಸ್ತಕ ಓದುವ ಕಾರ್ಯ ನಡೆಯಬೇಕಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ದಿ.ದೇವರಾಜ ಅರಸು ಅವರು ಸರ್ವರು ರಾಷ್ಟ್ರಕಂಡ ಧೀಮಂತ ನಾಯಕ, ಮುತ್ಸದ್ದಿ ರಾಜಕಾರಣ , ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ. ದೇಶಕ್ಕೆ ರಾಜಕೀಯ ಸ್ವಾತಂತ್ರ‍್ಯ ದೊರೆತರೆ ಸಾಲದು ದುರ್ಬಲರಿಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರವು ದೊರೆತಾಗ ಮಾತ್ರ ನಿಜವಾದ ಸ್ವಾತಂತ್ರ‍್ಯ ದೊರೆತಂತಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ದೇವರಾಜ ಅರಸುರವರು ಸಮಾಜದ ಮಾರ್ಗದರ್ಶಕರಾಗಿದ್ದು, ಸಣ್ಣ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಶ್ರೀಮಂತರ ಮನೆಯಲ್ಲಿ ಹುಟ್ಟಿ ಬೆಳೆದರು ದುರ್ಬಲ ವರ್ಗಗಳ ಏಳಿಗೆಗೆ ಆದ್ಯತೆ ನೀಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳ ಪ್ರತಿಮೆಯನ್ನು ಪ್ರತಿ ಜಿಲ್ಲೆಗೆ ಸ್ಥಾಪನೆ ಮಾಡಲು ಸರ್ಕಾರದ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ, ಶೋಷಿತರ ಹಾಗೂ ಅವಕಾಶ ವಂಚಿತರ ಪರವಾಗಿ ಇದ್ದವರು ದೇವರಾಜ ಅರಸು ಅವರು ಎಂದರು.
ಧಾರವಾಡದ ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ನಿರ್ದೇಶಕ ಪ್ರೊ.ಎಂ.ಚಂದ್ರ ಪೂಜಾರ ಮಾತನಾಡಿ ದೇವರಾಜ ಅರಸು ಅವರು ಒಬ್ಬ ದಾರ್ಕ್ಷಿಣಿಕ ವ್ಯಕ್ತಿಯಾಗಿದ್ದು, ಕರ್ನಾಟಕ ಸಾಂಸ್ಕೃತಿಕವಾಗಿ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಮಲ, ಜೀತ ಪದ್ಧತಿ ನಿರ್ಮೂಲನೆ ಮಾಡಿದ್ದಾರೆ. ದುಡಿಯುವ ವರ್ಗಕ್ಕೆ ಆರ್ಥಿಕ ಸ್ಥಿತಿ ಸುಧಾರಣೆ ಮಾಡುವ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದರು.

ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸಿಇಒ ಶಶಿಧರ ಕುರೇರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ.ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಽಕಾರಿ ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.