ಚಿತ್ರದುರ್ಗ: ಚಿತ್ರದುರ್ಗವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸರ್ಕಾರಿ ನೌಕರರು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಪಂ ಸಿಇಒ ಡಾ.ಎಸ್. ಆಕಾಶ್ ಮನವಿ ಮಾಡಿದರು.
ಚಿತ್ರದುರ್ಗದ ಆಶ್ರಿತ ಸಂಸ್ಥೆ, ಜಿಲ್ಲಾಡಳಿತ, ಜಿಪಂ,ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಗುರುವಾರ ನಗರದ ಕ್ರೀಡಾ ಭವನದಲ್ಲಿ ಆಯೋಜಿಸಿದ್ದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಷೇಧ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಬಾಲ್ಯವಿವಾಹ ಪದ್ಧತಿ ಕೊನೆಗಾಣಿಸಲು ಸಾಕಷ್ಟು ಕೆಲಸ ಮಾಡುತ್ತಿವೆ. ಆದರೂ ಗ್ರಾಮೀಣ ಪ್ರದೇಶದಲ್ಲಿ ಇಂಥ ಘಟನೆಗಳು ನಡೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಶಿಕ್ಷಣ ಪಡೆದವರು ತಮ್ಮ ಕಣ್ಣೆದುರಲ್ಲೇ ಬಾಲ್ಯ ವಿವಾಹ ನಡೆಯುತ್ತಿದ್ದರೂ ಅದನ್ನು ತಡೆಯದೇ ಮೌನ ವಹಿಸುವುದು ಸರಿಯಲ್ಲ. ಈ ಕೆಲಸ ಮಹಿಳಾ ಮತ್ತು ಮಕ್ಕಳ ಇಲಾಖೆ ಜವಾಬ್ದಾರಿ ಎಂಬ ಮನಸ್ಥಿತಿಯಿಂದ ಹೊರಬರಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ಹತೋಟಿಗೆ ಹೆಚ್ಚಿನ ಗಮನ ಹರಿಸಬೇಕಿದೆ. ಬಾಲಗರ್ಭಿಣಿಯರ ಸಂಖ್ಯೆಗೆ ಕಡಿವಾಣ ಹಾಕಲು ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.
ಎಡಿಸಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆ ಸಂಬಂಧ ಜಿಲ್ಲಾಡಳಿತ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕಿದೆ. ಪ್ರೌಢಶಾಲಾ ಮತ್ತು ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳು ಆಗಬೇಕಿದೆ. ವಿವಿಧ ಇಲಾಖೆ ಗಳ ಅಧಿಕಾರಿಗಳು ಕಾನೂನು ತಿಳಿವಳಿಕೆಯೊಂದಿಗೆ ಚಿತ್ರದುರ್ಗವನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಆಶ್ರೀತ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಎಸ್.ನಾಗರಾಜ್ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಸ್ಥೆ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಸಕ್ತ 4 ತಿಂಗಳಿನಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್‌ಕುಮಾರ್, ಡಿಡಿಪಿಐ ಎಂ.ಆರ್. ಮಂಜುನಾಥ್, ಡಿವೈಎಸ್‌ಪಿ ಪಿ.ಕೆ. ದಿನಕರ್, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ಪಿ. ಶೀಲಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ, ಆರ್‌ಸಿಎಚ್ ಅಧಿಕಾರಿ ಡಾ. ಅಭಿನವ್ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಬಿನು ವರ್ಗೀಸ್ ಉಪನ್ಯಾಸ ನೀಡಿದರು. ಧನಂಜಯ ಪ್ರಾರ್ಥಿಸಿದರು. ಸಂಸ್ಥೆ ಜಿಲ್ಲಾ ಸಂಯೋಜಕ ಡಿ.ಒ. ಮುರಾರ್ಜಿ ಸ್ವಾಗತಿಸಿದರು. ಹರ್ಷವರ್ಧನ ನಿರೂಪಿಸಿ, ದೇವಿರಮ್ಮ ವಂದಿಸಿದರು.
(ಸಿಟಿಡಿ 25 ಬಾಲ್ಯ ವಿವಾಹ)
ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಷೇಧ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಡಾ.ಎಸ್. ಆಕಾಶ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸ್.ನಾಗರಾಜ್, ವಿಜಯ್‌ಕುಮಾರ್, ಎಂ.ಆರ್. ಮಂಜುನಾಥ್, ಪಿ.ಕೆ. ದಿನ ಕರ್, ಪಿ. ಶೀಲಾ, ಅನಿಲ ಬಾಲಚಂದ್ರ ಬಗಟಿ, ಡಾ. ಅಭಿನವ್, ಬಿನು ವರ್ಗೀಸ್ ಇತರರು ಇದ್ದರು.