ಜಿಲ್ಲೆ

ಸಾಮಾಜಿಕ ಭದ್ರತೆಗಾಗಿ ಪ್ರತ್ಯೇಕ ಅಧಿನಿಯಮ

ಚಿತ್ರದುರ್ಗ: ಗಿಗ್, ಸಿನಿಮಾ ಮತ್ತು ಸಾಂಸ್ಕೃತಿಕ ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ದೇಶದಲ್ಲೇ ಪ್ರಥಮ ಬಾರಿ ರಾಜ್ಯ ಸರ್ಕಾರ ಇ-ಕಾಮರ್ಸ್ ಪ್ಲಾಟ್ ಫಾರ್ಮ್ ಆಧಾರಿತ ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದರು.

ಕಾರ್ಮಿಕ, ಸಾರಿಗೆ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾಡಳಿತ, ಜಿಪಂನಿಂದ ನಗರದ ಎಸ್‌ಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ವಿವಿಧ ಯೋಜನೆಗಳ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ವರ್ಷಕ್ಕೆ ಅಂದಾಜು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ. ಅವುಗಳ ಮೇಲೆ ಸೆಸ್ ವಿಧಿಸುವ ಕುರಿತು ಸಿಎಂ ಜೊತೆಗೆ ಚರ್ಚಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024 ಅನ್ನು ರಚಿಸಲಾಗಿದೆ. ಅಲ್ಲದೆ, ಮನೆಗೆಲಸಗಾರರ ಕಲ್ಯಾಣಕ್ಕಾಗಿ ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025 ರಚಿಸಲಾಗಿದೆ. ಸದನದಲ್ಲಿ ಅನುಮೋದನೆ ಪಡೆದು ಜಾರಿಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

5 ವರ್ಷದಲ್ಲಿ 3ಲಕ್ಷ ಕೋಟಿ ರೂ. ಖರ್ಚು: ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ರೂ. ಖರ್ಚಾಗಲಿದೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಮೊತ್ತವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ ಎಂದರು.

ರಾಜ್ಯದಲ್ಲಿ 30ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರಿದ್ದು, ಇಲಾಖೆ 91 ವಿಧದ ಕಾರ್ಮಿಕರನ್ನು ಗುರುತಿಸಿದೆ. ಉಚಿತ ನೋಂದಣಿಯೊಂದಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿಗೊಳಿಸಲಾಗಿದೆ. ಈವರೆಗೂ ರಾಜ್ಯದಲ್ಲಿ 25,45,607, ಚಿತ್ರದುರ್ಗ ಜಿಲ್ಲೆಯಲ್ಲಿ 65,644 ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ತಿಳಿಸಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ ಚಾಲಕರು, ನಿರ್ವಾಹಕರು, ಕ್ಲೀನರ್ಸ್‌, ನಿಲ್ದಾಣ ಸಿಬ್ಬಂದಿ, ಮಾಲೀಕರು, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿ ಮೋಟಾರು ಕ್ಷೇತ್ರದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ ಇ-ಶ್ರಮ್ ಪೋರ್ಟಲ್ ಮೂಲಕ 1.6 ಕೋಟಿ ಕಾರ್ಮಿಕರು ನೋಂದಣಿಯಾಗಿದ್ದಾರೆ. ಖಾಸಗಿ ವಲಯದ ಉದ್ಯೋಗಗಳಲ್ಲಿ ಎಸ್ಸಿ-ಎಸ್ಟಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರ ಆಶಾದೀಪ ಯೋಜನೆ ಜಾರಿಗೊಳಿಸಿದೆ. ಇದರ ಮೂಲಕ ಪ್ರತಿ ಉದ್ಯೋಗಿಯ ಮಾಸಿಕ ತಲಾ 6ಸಾವಿರ ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಅದ್ಭುತ ಯೋಜನೆಗಳನ್ನು ಸಚಿವರು ಜಾರಿಗೊಳಿಸಿದ್ದಾರೆ. ಅವುಗಳ ಕುರಿತು ಹೆಚ್ಚಿನ ಜನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸಚಿವರು ಕಾರ್ಯಪ್ರವೃತ್ತರಾಗಿದ್ದು, ಇಲಾಖೆಯನ್ನು ಚುರುಕಾಗಿ ಮುನ್ನಡೆಸುತ್ತ ಜನಪರವಾಗಿ ಶ್ರಮಿಸುತ್ತಿದ್ದಾರೆ ಎಂದು ಶಾಸಕರಾದ ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಮಾತನಾಡಿ, ಕಾರ್ಮಿಕ ಸಚಿವರು ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ರದ್ದು ಪಡಿಸಿದ್ದಾರೆ. ಇದರಿಂದ ಅರ್ಹರಿಗೆ ಇಲಾಖೆಯ ಅನೇಕ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತಾಗಿದೆ ಎಂದರು.

ಇದೇ ವೇಳೆ ಮಾಜಿ ವಿಧಾನ ಸಭಾಪತಿ ಎನ್. ತಿಪ್ಪಣ್ಣ ಸ್ಮರಣಾರ್ಥ ಒಂದು ನಿಮಿಷ ಮೌನ ಆಚರಿಸಲಾಯಿತು. ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತರಿಗೆ 5 ಲಕ್ಷ ರೂ. ಪರಿಹಾರ ಧನ, ಸಾರಿಗೆ ಕಾರ್ಮಿಕರ ಸಹಜ ಮರಣ ಪರಿಹಾರ ಯೋಜನೆಯಡಿ ಅಂತ್ಯಕ್ರಿಯ ವೆಚ್ಚಕ್ಕೆ 25 ಸಾವಿರ ರೂ.ನ ಚೆಕ್, ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ, ಉಪ ಕಾರ್ಮಿಕ ಆಯುಕ್ತ ಡಾ. ವೆಂಕಟೇಶ್ ಶಿಂದಿಹಟ್ಟಿ, ಜಂಟಿ ಕಾರ್ಮಿಕ ಆಯುಕ್ತರಾದ ಡಾ.ಎಸ್.ಬಿ. ರವಿಕುಮಾರ್, ಆಂಜನೇಯ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ. ಯೋಗಿಶ್‌ಬಾಬು, ಕೂಡ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಡಿಸಿ ಟಿ. ವೆಂಕಟೇಶ್, ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಡಿಸಿ ಬಿ.ಟಿ. ಕುಮಾರಸ್ವಾಮಿ ಇತರರಿದ್ದರು.