ಹನೂರು: ಬಾಕಿಯಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವುದರ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ತಹಸೀಲ್ದಾರ್ ಗುರುಪ್ರಸಾದ್ ಸೂಚಿಸಿದರು.
ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದು ನಮ್ಮ ಆದ್ಯ ಕರ್ತವ್ಯ. ಹಾಗಾಗಿ ಚುನಾವಣೆ ಹಿನ್ನ್ನೆಲೆ ಬಾಕಿ ಉಳಿದಿರುವ ಕೆಲವು ಸಾರ್ವಜನಿಕ ಅರ್ಜಿಗಳು ಶೀಘ್ರ ವಿಲೇವಾರಿಯಾಗಬೇಕಿದೆ. ಪ್ರಕೃತಿ ವಿಕೋಪದಡಿ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಪಷ್ಟ ವರದಿ ಸಲ್ಲಿಸುವುದರ ಮೂಲಕ ಸರ್ಕಾರದಿಂದ ದೊರಕುವ ಪರಿಹಾರದ ಬಗ್ಗೆ ಅಗತ್ಯ ಕ್ರಮವಹಿಸಬೇಕು. ಈಗಾಗಲೇ ನಡೆದಿರುವ ಕಂದಾಯ, ಪಿಂಚಣಿ ಅದಾಲತ್, ಜಿಲ್ಲಾಧಿಕಾರಿ ಕಡೆ ಹಳ್ಳಿ ಕಡೆ ಕಾರ್ಯಕ್ರಮ ಹಾಗೂ ಇನ್ನಿತರ ಸಭೆಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಲೇವಾರಿಗೊಳಿಸಬೇಕು. ಗ್ರಾಮೀಣಾಭಿವೃದ್ಧಿ, ಸಾರಿಗೆ, ಕೃಷಿ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಆಯಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಬೇಕು.
ಭೂ ಮಾಪನ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳಿದ್ದು, ಅಳತೆ ಕಾರ್ಯವಾಗಬೇಕಿದೆ. ಆದರೆ ಹನೂರಿನಲ್ಲಿ ಭೂ ಮಾಪನ ಇಲಾಖೆ ಇಲ್ಲದ ಪರಿಣಾಮ ಅಳತೆ ಕಾರ್ಯ ವಿಳಂಬವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು. ಜತೆಗೆ ಕೆಲವು ಗ್ರಾಮಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಪರಿಶೀಲಿಸಿ ಸರ್ವೇ ನಡೆಸಿ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಬೇಕು. ಈ ಬಗ್ಗೆ ವರದಿ ಸಲ್ಲಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ತಾಕೀತು ಮಾಡಿದರು.
ಇದೇ ವೇಳೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಉಪ ತಹಸೀಲ್ದಾರ್ ಸುರೇಖಾ, ಶಿರಸ್ತೇದಾರ್ ನಾಗೇಂದ್ರ, ಆರ್‌ಐಗಳಾದ ಮಾದೇಶ್, ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿಗಳಾದ ರಾಜು, ಶೇಷಣ್ಣ, ವಿನೋದ್, ಕಾರ್ತಿಕ್, ಮಾರುತಿ, ಶರವಣ, ಕಾವ್ಯಾ ಇನ್ನಿತರರು ಇದ್ದರು.