ಜಿಲ್ಲೆ

ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಿ

ಯಳಂದೂರು: ಸರ್ಕಾರಿ ಆಸ್ಪತ್ರೆಗೆ ಬರುವ ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಸೂಚಿಸಿದರು.


ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಮಾತನಾಡಿ, ಪಟ್ಟಣ ಸರ್ಕಾರಿ ಆಸ್ಪತ್ರೆಯನ್ನು ತಾಲೂಕು ಮಟ್ಟದ ಆಸ್ಪತ್ರೆ ಮಾಡಲು ಹೊಸ ತಾಲೂಕು ನಿಯಮಗಳ ಪ್ರಕಾರ ಸ್ವಲ್ಪ ವಿಳಂಬವಾಗುತ್ತಿದ್ದು, ಸರ್ಕಾರ ಅನುಮೋದಿಸಬೇಕು. ಈ ಬಗ್ಗೆ ಪರಿಶೀಲಿಸಿ ತಾಲೂಕು ಮಟ್ಟದ ಆಸ್ಪತ್ರೆ ಮಾಡುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.


ಕೇಂದ್ರ ಸ್ಥಳದಲ್ಲಿ ವಾಸ ಮಾಡದ ವೈದ್ಯರು: ತಾಲೂಕಿನಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಹೆರಿಗೆ, ತುರ್ತು ಸಂದರ್ಭಗಳಲ್ಲಿ ವೈದ್ಯರು ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ತುರ್ತು ಸಮಯದಲ್ಲಿ ಚಿಕಿತ್ಸೆ ದೊರಕದೆ ದೂರದ ಮೈಸೂರು, ಚಾಮರಾಜನಗರ, ಕೊಳ್ಳೇಗಾಲಕ್ಕೆ ತೆರಳಬೇಕಾದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ದೂರು ನೀಡಿದರು.


ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ್, ರಾತ್ರಿ ವೇಳೆ ಖಾಯಂ ವೈದ್ಯರನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾತ್, ಡಾ.ಶ್ರೀಧರ್, ಡಾ.ಶಶಿರೇಖಾ, ಆಸ್ಪತ್ರೆ ವ್ಯವಸ್ಥಾಪಕ ಸೋಮಣ್ಣ ಇತರರು ಹಾಜರಿದ್ದರು.