ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‌ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಚಿಕ್ಕಮಗಳೂರು ತಾಲೂಕು ಕೆಡಿಪಿ ಸಭೆಯಲ್ಲಿ ಸಿ.ಟಿ. ರವಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‌ಗಳನ್ನು ನಕ್ಸಲೀಯರು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದರು. ಅಲ್ಲಿ ತಮ್ಮ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಇದು ಹಾಸ್ಟಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಮಾಡಿರುವ ಅವಮಾನ ಎಂದರು.
ಸಿ.ಟಿ.ರವಿ ಅವರು ಕಳೆದ ಇಪ್ಪತ್ತು ವರ್ಷಗಳ ಕಾಲ ಶಾಸಕರು, ಸಚಿವರಾಗಿದ್ದರು. ಅವರ ಕಾಲದಲ್ಲಿ ಈ ಸಂಬAಧ ಏಕೆ ತನಿಖೆ ನಡೆಸಲಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನಕ್ಸಲ್ ಪಟ್ಟ ಕಟ್ಟಲು ಮುಂದಾಗಿದ್ದಾರೆ. ಹಾಗಾಗಿ ಕೂಡಲೇ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ವಸಂತಕುಮಾರ್, ಸಂತೋಷ್, ನಟರಾಜ್, ಪುಟ್ಟಸ್ವಾಮಿ ಹಾಗೂ ಅಣ್ಣಯ್ಯ ಉಪಸ್ಥಿತರಿದ್ದರು.