ಜಿಲ್ಲೆ

ಸಿಎಂ ಮೀಟಿಂಗ್ ಬಳಿಕ ಅಂತಿಮ ನಿರ್ಧಾರ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಬೆಂಗಳೂರಿನಲ್ಲಿ ಬುಧವಾರ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು ಸ್ಥಳ ಪರಿಶೀಲಿಸಿ ತಮ್ಮ ಅಭಿಪ್ರಾಯ ಮಂಡಿಸಿದ ನಂತರ, ಈ ಕುರಿತು ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಹಾಗೂ ಕಂದಾಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ಶಾಸಕರು, ಸಚಿವರ ಸಭೆಯಲ್ಲಿ ಕೈಗೊಳ್ಳಲು ನಿರ್ಧರಿಸಲಾಯಿತು.

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯೊಂದಿಗೆ ಸಭೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರೊಂದಿಗೆ ಸಚಿವ ಸುಧಾಕರ್ ಅವರು ಮಹತ್ವದ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ನೂತನ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ, ವೈದ್ಯಕೀಯ ಕಾಲೇಜಿಗೆ ನೀಡುವ ಕುರಿತು ಚರ್ಚಿಸಲಾಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು ಹಾಗೂ ತಜ್ಞರ ತಂಡವನ್ನು ಸ್ಥಳಕ್ಕೆ ಕಳುಹಿಸುವಂತೆ ಪ್ರಧಾನ ಕಾರ್ಯದರ್ಶಿಗೆ ಸುಧಾಕರ್ ಸೂಚಿಸಿದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಸಿಂಗ್ ಕಟಾರಿಯ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಪಂ ಸಿಇಒ ಡಾ.ಎಸ್. ಆಕಾಶ್, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಇದ್ದರು.