ಹಾಸನ: ಮೈಸೂರಿನ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ದಲಿತರ ಪರ ಎಂದು ಹೇಳಿಕೊಂಡೆ ದಲಿತರ ಪಾಲಿಗೆ ಮಾರಕವಾಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಕೋಟ್ಯಂತರ ರೂ. ಲೂಟಿ ಮಾಡಿ ದಲಿತ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಅಲ್ಲದೆ ತಮ್ಮ ಮೇಲೆ ಬಂದಿರುವ ಆರೋಪ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಬೀದಿ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ಪ್ರತಿಕೃತಿ ದಹಿಸುವ ಜತೆಗೆ ಚಪ್ಪಲಿಗಳಲ್ಲಿ ಅವರ ಭಾವಚಿತ್ರಕ್ಕೆ ಹೊಡೆಯುವ ಮೂಲಕ ತಮ್ಮ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಮುಂದಾದರೆ ಮುಂದಿನ ದಿನಗಳಲ್ಲಿ ಬಾಂಗ್ಲಾದಲ್ಲಿ ನಡೆದಿರುವ ಹಿಂಸಾಚಾರ ಕರ್ನಾಟಕದಲ್ಲಿ ಕೂಡ ನಡೆಯಲಿದೆ ಎಂಬ ಹೇಳಿಕೆಗಳನ್ನು ನೀಡಿರುವವರ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದಲಿತರ ಪರ ಎಂದು ಹೇಳಿಕೊಂಡೆ ಅವರಿಗೆ ಅನ್ಯಾಯ ಮಾಡುವ ಮೂಲಕ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರು ಈ ಹಿಂದೆ ಪರಮೇಶ್ವರ್ ಅವರನ್ನೇ ಸೋಲಿಸಿ ಅವರಿಗೂ ಅಪಮಾನ ಮಾಡಿದ್ದಾರೆ. ಈಗ ದಲಿತ ರಾಜ್ಯಪಾಲರಿಗೆ ಅಪಮಾನ ಮಾಡುತ್ತಿದ್ದಾರೆ. ಅವರು ತಪ್ಪು ಮಾಡಿಲ್ಲ ಎಂದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪರ್ವತಯ್ಯ, ಎಸ್.ಡಿ. ಚಂದ್ರು, ರಮೇಶ್, ಅರುಣ್ ಕುಮಾರ್ ಇತರರು ಉಪಸ್ಥಿತರಿದ್ದರು.