ಜಿಲ್ಲೆ

ಸಿಎಂ ವಿರುದ್ಧ ಬಿಜೆಪಿ ಕುತಂತ್ರ: ಸಚಿವೆ ಹೆಬ್ಬಾಳ್ಕರ್​ ಕಿಡಿ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ನೀಡಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನು ಮೂಲಕ ಸಮರ್ಥವಾಗಿ ಎದುರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅಂತಿಮ ವರದಿ ಸರ್ಕಾರದ ಕೈಸೇರಿಲ್ಲ. ಇದೀಗ ರಾಜ್ಯಪಾಲರು ಏಕಾಏಕಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಮೂಲಕ ತಮ್ಮ ಸಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಕೇಂದ್ರ ಸರ್ಕಾರವು ಬಿಜೆಪಿಯೇತರ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಕಿರುಕುಳ ನೀಡಿ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ. ಪದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಬಿಜೆಪಿ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದರು.

ಅಂದಿನ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರ್ಕಾರವಿತ್ತು.ಅವರ ಪದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯ. ಅವರ ಮುಖಕ್ಕೆ ಮಸಿ ಬಳಿಯಲು ಹೋದವರನ್ನು ಜನರು ಮಿಸುವುದಿಲ್ಲ. ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.