ಬೆಳಗಾವಿ: ಜುಲೈ ತಿಂಗಳು ಮಳೆಗಾಲದ ಸಮಯವಾಗಿದ್ದು, ಡೆಂೆ ರೋಗ ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ಮನೆಯ ಸುತ್ತ-ಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಎಂ.ಎಸ್. ಪಲ್ಲೇದ ತಿಳಿಸಿದ್ದಾರೆ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಡೆಂೆ ವಿರೋಧಿ ಮಾಸಾಚರಣೆಗೆ ನಗರದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಬೇಕು ಎಂದರು.
ಕಟ್ಟಡಗಳ ನಿರ್ಮಾಣ ಪ್ರದೇಶ ಹಾಗೂ ಇತರ ಅಭಿವೃದ್ಧಿ ಕಾಮಗಾರಿ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜಾನುವಾರುಗಳು ನೀರು ಕುಡಿಯುವ ತೊಟ್ಟಿಗಳನ್ನು ಹಾಗೂ ಹೊರಾಂಗಣ ಮತ್ತು ಒಳಾಂಗಣ ನೀರು ಶೇಖರಣಾ ತೊಟ್ಟಿಗಳನ್ನು ವಾರಕ್ಕೊಮ್ಮೆಯಾದರೂ ಸ್ವಚ್ಛಗೊಳಿಸಬೇಕು. ಸೊಳ್ಳೆ ಕಡಿತದಿಂದ ಪಾರಾಗಲು ಸ್ವಯಂ ರಕ್ಷಣಾ ವಿಧಾನ ಅನುಸರಿಸಬೇಕು. ಸಂಜೆ ವೇಳೆ ಬೇವಿನ ಸೊಪ್ಪಿನ ಹೊಗೆ ಹಾಕುವ ಮೂಲಕ ಸೊಳ್ಳೆ ನಿಯಂತ್ರಣ ಮಾಡಿಕೊಳ್ಳಬೇಕು ಎಂದರು. ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಸಿಬ್ಬಂದಿ ಇದ್ದರು.