ಜಿಲ್ಲೆ

ಸುರ್ಜೆವಾಲ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಇಂದು

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಜ.21ರಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜೈ ಬಾಪು, ಜೈಭೀಮ, ಜೈ ಸಂವಿಧಾನ (ಗಾಂಧಿ ಭಾರತ-100) ಸಮಾವೇಶದ ಹಿನ್ನೆಲೆಯಲ್ಲಿ ಅವಿಭಜಿತ ಧಾರವಾಡ ಜಿಲ್ಲೆಯ ಪೂರ್ವಭಾವಿ ಸಭೆ ಜ. 18ರಂದು ಮಧ್ಯಾಹ್ನ 2ಗಂಟೆಗೆ ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಗೋಕುಲ ರಸ್ತೆಯ ಹೋಟೆಲ್ ಕ್ಯೂಬಿಕ್ಸ್ ಸಭಾಂಗಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲ ಸಭೆ ತೆಗೆದುಕೊಳ್ಳುವರು. ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಎಐಸಿಸಿ ಕಾರ್ಯದರ್ಶಿ ಮಯೂರ ಜಯರಾಮ್ ಪಾಲ್ಗೊಳ್ಳುವರು.

ಜೈ ಬಾಪು, ಜೈಭೀಮ, ಜೈ ಸಂವಿಧಾನ (ಗಾಂಧಿ ಭಾರತ-100) ಸಮಾವೇಶದ ಕುರಿತು ಶುಕ್ರವಾರ ಬೆಳಗಾವಿಯಲ್ಲಿ ಸಭೆ ನಡೆಸಲಾಗಿದೆ. ಶನಿವಾರ ಹುಬ್ಬಳ್ಳಿಯ ಸಭೆಯಲ್ಲಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿಗಳ ಅಧ್ಯಕ್ಷರು ಭಾಗವಹಿಸುವರು. ಸಮಾವೇಶವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ, ಧಾರವಾಡ ಗ್ರಾಮೀಣ ಜಿಲ್ಲಾ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳುವರು.