ಮಡಿಕೇರಿ:
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆ.೧೬ ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ತಿಳಿಸಿದ್ದಾರೆ. ಅಂದು ಸಂಜೆ ೬ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್‌ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ೧ ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.
ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾರುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಲಾಂಛನವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ತ್ಯಾಗರಾಜ್, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ.ರಾಜೇಂದ್ರ, ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಡಗು ಪ್ರೆಸ್ ಕ್ಲಬ್ ಸದಸ್ಯರು ಮತ್ತು ಕುಟುಂಬಸ್ಥರಿಗೆ ಮನರಂಜನಾ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ ೧೦ ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ. ಮುಖ ್ಯಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ೧.೩೦ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕರಾದ ಜಿ.ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಉದ್ಯಮಿ ನಾಪಂಡ ಎಂ. ಮುದ್ದಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ, ಖಜಾಂಚಿ ಬೊಳ್ಳಜೀರ ಬಿ. ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‌ಕುಮಾರ್, ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರೆಸ್ ಕ್ಲಬ್ ಉಪಾಧ್ಯಕ್ಷರಾದ ಚೀಯಂಡಿ ತೇಜಸ್ ಪಾಪಯ್ಯ ಗೋಷ್ಠಿಯಲ್ಲಿದ್ದರು