ಬಳ್ಳಾರಿ : ದೇಹದ ಚರ್ಮದ ಮೇಲೆ ಸ್ಪರ್ಶವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖ ಹಾಗೂ ಕಿವಿಯ ಮೇಲೆ ಗಂಟುಗಳು ಕಂಡುಬಂದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಎಂದು ಪಾಲಿಕೆ ಮೇಯರ ಮುಲ್ಲಂಗಿ ನಂದೀಶ ಹೇಳಿದರು.
ಇಲ್ಲಿನ ದೇವಿನಗರದ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯ ವಾರ್ಡ್‌ನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರಿಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಸೋಮವಾರ ಆಯೋಜಿಸಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹೊಸದಾಗಿ ಕುಷ್ಠರೋಗ ಪ್ರಕರಣಗಳು ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತಿ ಶೀಘ್ರವಾಗಿ ಪತ್ತೆ ಹಚ್ಚಲಾಗುವುದು. ಜು.29 ರಿಂದ ಆ.14 ರ ವರೆಗೆ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಮನೆ ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಕೋರಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ ಮಾತನಾಡಿ, 2 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ತಪಾಸಣೆ ಕೈಗೊಂಡು ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಒಂದು ವೇಳೆ ಅಗತ್ಯವೆನಿಸಿದರೆ ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಯ ತಜ್ಞ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಕಳುಹಿಸಲಾಗುವುದು ಎಂದರು