ಜಿಲ್ಲೆ

ಸ್ಮಾರ್ಟ್ ಮೀಟರ್ ಆದೇಶ ಹಿಂಪಡೆಯಲಿ

ಹನೂರು: ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಸಂಬಂಧ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶುಕ್ರವಾರ ಪಟ್ಟಣದ ಸೆಸ್ಕ್ ಉಪ ವಿಭಾಗೀಯ ಕಚೇರಿ ಮುಂಭಾಗ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಈ ವೇಳೆ ಶೈಲೇಂದ್ರಕುಮಾರ್ ಮಾತನಾಡಿ, ಹನೂರು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹಾಗೂ ಸಮರ್ಪಕ ವಿದ್ಯುತ್ ನೀಡದ ಹಿನ್ನೆಲೆಯಲ್ಲಿ ಪಂಪ್‌ಸೆಟ್ ಮೂಲಕ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಂಡು ಕೃಷಿ ಮಾಡುತ್ತಿರುವ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿರುವುದು ಎಷ್ಟರ ಮಟ್ಟಿಗೆ ಸರಿ? ಈ ಯೋಜನೆ ಜಾರಿಗೆ ತಂದರೆ ರೈತರು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಅಳವಡಿಸುವ ಮೀಟರ್ ಕಳಚಿ ಇಲಾಖೆಗೆ ಒಪ್ಪಿಸುವ ಮೂಲಕ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ಸೆಸ್ಕ್ ಎಇಇ ರಂಗಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಲೂರ್ದುಸ್ವಾಮಿ, ಸಂತಿಯಾಗು, ಅಂತೋಣಿ, ವಸಂತ್‌ಕುಮಾರ್ ಇತರರಿದ್ದರು.