ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಸ್ವಾಭಿಮಾನಿ ದಲಿತ ಸಂಘಟನೆಗಳ ಒಕ್ಕೂಟ ಬೆಂಬಲಿಸಲು ತೀರ್ಮಾನಿಸಿದೆ ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ಅರೇಹಳ್ಳಿ ನಿಂಗರಾಜ ತಿಳಿಸಿದರು.
ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡರು ರೈತನ ಮಗನಾಗಿ ದೇಶವನ್ನ ಆಳಿಡಳಿತ ನಡೆಸಿದ್ದಾರೆ. ಅಲ್ಲದೆ ಅವರ ಕುಟುಂಬದಿಂದ ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಈ ಹಿನ್ನಲೆಯಲ್ಲಿ ಮುಂದೆಯೂ ಕೂಡ ಜಿಲ್ಲೆ ಅಭಿವೃದ್ಧಿ ಆಗಬೇಕಾದರೆ ಪ್ರಜ್ವಲ್ ರೇವಣ್ಣ ಅವರ ಗೆಲುವು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸುವ ಮೂಲಕ ಅವರ ಗೆಲುವಿಗೆ ಸಹಕರಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ಜಿಲ್ಲೆಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ. ಅಲ್ಲದೆ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಕಾಲೇಜು, ಆರೋಗ್ಯ, ರಸ್ತೆ ಸೇರಿದಂತೆ ಹಲವು ಕೆಲಸಗಳನ್ನ ಮಾಡಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಧರ್ಮಯ್ಯ, ರಮೇಶ್, ಕುಮಾರ್, ಹರೀಶ್, ಪುನೀತ್ ಇದ್ದರು.