ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹಾಸನದಲ್ಲಿ ಡಿ.5ರಂದು ಹಮ್ಮಿಕೊಂಡಿರುವ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ಪ್ರಚಾರ ರಥಕ್ಕೆ ನಗರದಲ್ಲಿ ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
ನಗರದ ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಎದುರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳು, ನಗರದ ಪ್ರದೇಶದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ವಾಹನ ಸಂಚಾರ ಮಾಡಲಿದೆ. ಡಿ.4ರಂದು ಮುಕ್ತಾಯಗೊಂಡು 5ರಂದು ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ.
ಬಿ.ಆರ್.ಅಂಬೇಡ್ಕರ್, ದೇವರಾಜ ಅರಸು, ಸಿದ್ದರಾಮಯ್ಯ, ಶಾಸಕರು, ಜನಪ್ರತಿನಿಧಿಗಳ ಭಾವಚಿತ್ರ ಹೊಂದಿರುವ ಪ್ರಚಾರ ವಾಹನದಲ್ಲಿ ಸಮಾವೇಶದ ಉದ್ದೇಶ ಬಗ್ಗೆ ಮಾಹಿತಿ ಇದೆ ಎಂದರು
ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. 45 ವರ್ಷಗಳ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ನಿಷ್ಕಳಂಕ ನೈತಿಕತೆ ಸಾಕ್ಷಿಪ್ರಜ್ಞೆಯಾಗಿದ್ದಾರೆ. 2ನೇ ಬಾರಿ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನಡೆಸುತ್ತಿದ್ದಾರೆ.
ಇದನ್ನು ಸಹಿಸದ ರಾಜಕೀಯ ದುಷ್ಟಶಕ್ತಿಗಳು ಸಾಮಾನ್ಯ ಜನರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಗಟ್ಟಿಯಾಗಿ ನಿಲ್ಲಲು ಶೋಷಿತ, ಅಹಿಂದ ವರ್ಗಗಳು ಸೇರಿ ಸಮಾವೇಶ ಮಾಡುತ್ತಿವೆ ಎಂದರು
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಾಹಿತಿಗಳಾದ ಪ್ರೊ.ಕಾಳೇಗೌಡ ನಾಗವಾರ, ಪ್ರೊ.ಕೆ.ಎಸ್.ಭಗವಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಉಪ್ಪಾರ ಸಮಾಜದ ಮೈಸೂರು ಜಿಲ್ಲಾಧ್ಯಕ್ಷ ಎಸ್.ಯೋಗೀಶ ಉಪ್ಪಾರ ಇನ್ನಿತರರಿದ್ದರು.