ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳು ಸೆ.17ರಂದು ವಿಮೋಚನೆಗೊಂಡ ದಿನ. ಹೀಗಾಗಿ ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಗುತ್ತಿದೆ ಎಂದು ಎಡಿಸಿ ಮಹಮ್ಮದ್ ಎನ್. ಝಬೇರ್ ಹೇಳಿದರು.
ನಗರದ ನೂತನ ಡಿಸಿ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆಚರಣೆಯು ಹಬ್ಬದಂತಿರಬೇಕು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಇಲ್ಲಿನ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ, ವೇದಿಕೆ, ಸನ್ಮಾನ, ಸ್ವಚ್ಛತೆ ಮತ್ತು ಕುಡಿಯುವ ನೀರಿನ, ವಿದ್ಯುತ್ , ದೀಪಾಲಂಕಾರ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ 371 ಜೆ ಕುರಿತು ಪ್ರಬಂಧ ಆಯೋಜಿಸಬೇಕು ಮತ್ತು ಎಲ್ಲ ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಿ ಎಂದರು. ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ, ಕುರ್ಚಿ ಮತ್ತು ಲಘು ಉಪಹಾರದ ವ್ಯವಸ್ಥೆ ಹಾಗೂ ಮೈದಾನದ ಸ್ವಚತೆಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ನಡೆಯುವ ಮೈದಾನದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ವಾಹನ ಸಂಚಾರ ಕ್ರಮಬದ್ಧಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಮತ್ತು ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.