ಜಿಲ್ಲೆ

ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

ಚಾಮರಾಜನಗರ: ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರ ಅವರಣದ ಮುಂಭಾಗ ಕರ್ನಾಟಕ- ಸುವರ್ಣ ಸಂಭ್ರಮ-50ರ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪರದೆ ಸರಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಮಾತನಾಡಿ, ಹಲ್ಮಿಡಿ ಕನ್ನಡದ ಮೊದಲ ಶಾಸನವಾಗಿದೆ. ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಮೊದಲು ಪತ್ತೆ ಹಚ್ಚಲಾದ ಶಾಸನದಲ್ಲಿ 16 ಸಾಲುಗಳ ಬರಹವಿದ್ದು, ಶಾಸನವು ಕ್ರಿಸ್ತ ಶಕ 450ರ ಸುಮಾರಿನ ಕಾಲದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನಗಳು, ಅವಲೋಕನಗಳು ನಡೆದಿವೆ. ಸರ್ಕಾರದ ನಿರ್ದೇಶನದನ್ವಯ, ಈ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿಯೂ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸಲಾಗಿದೆ ಎಂದರು.

ಈ ವೇಳೆ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ ಚಂದ್ರು, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭಾ ಉಪಾಧ್ಯಕ್ಷೆ ಎಚ್.ಎಸ್.ಮಮತ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.