ಜಿಲ್ಲೆ

ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹ

ಗುಂಡ್ಲುಪೇಟೆ: ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಂಕಪ್ಪ ಒತ್ತಾಯಿಸಿದರು.
ಒಪಿಎಸ್ ಯೋಜನೆಯು ಈಗಾಗಲೇ ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ ಪ್ರದೇಶಗಳಲ್ಲಿ ಜಾರಿಯಲ್ಲಿದೆ. ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕು. ವೇತನ ಭತ್ಯೆ ಪರಿಷ್ಕರಣೆ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ತ್ವರಿತವಾಗಿ ಜಾರಿ ಮಾಡಿ, ಶೇ.40 ವೇತನ ಹೆಚ್ಚಳ ಮಾಡಬೇಕು. ಬೇಡಿಕೆಗಳು ಈಡೇರದಿದ್ದಲ್ಲಿ ಮಾರ್ಚ್ 1ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ. ಆರೋಗ್ಯ ಮತ್ತು ತುರ್ತು ಸೇವೆಯ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪದಾಧಿಕಾರಿಗಳು ಇದ್ದರು.