ಹನೂರು: ಸಮೀಪದ ಬೆಳತ್ತೂರು ಗ್ರಾಮದಲ್ಲಿ ಹಾವು ಕಚ್ಚಿ ಗಾಯಗೊಂಡಿದ್ದ ವೃದ್ಧೆ ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಗ್ರಾಮದ ಶಿವಮಲ್ಲಮ್ಮ (70) ಮೃತರು. ಏ.25ರ ರಾತ್ರಿ ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಇವರನ್ನು ಕುಟುಂಬಸ್ಥರು ಸಮೀಪದ ಕಾಮಗೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹನೂರು ಪೊಲೀಸರು ಮೃತದೇಹವನ್ನು ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದರು.