ಚಿತ್ರದುರ್ಗ: ಹಾಸ್ಟೆಲ್‌ಗಳ ಪ್ರವೇಶ ಪ್ರಕ್ರಿಯೆ ವಿಳಂಬ ಹಾಗೂ ವಿದ್ಯಾರ್ಥಿ ವೇತನ ಪಾವತಿಸದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ‌್ಯಕರ್ತರು ನಗರದ ವೀರ ವನಿತೆ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಈ ವಿಳಂಬ ಧೋರಣೆಯಿಂದಾಗಿ ಗ್ರಾಮೀಣ ಬಡ, ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಆಗಿದೆ. ರಾಜ್ಯದಲ್ಲಿ ಶಾಲಾ, ಕಾಲೇಜುಗಳು ಪ್ರಾರಂಭವಾಗಿ ಮೂರು ತಿಂಗಳಾಗುತ್ತಾ ಬಂದಿದ್ದರೂ ವಿವಿಧ ಇಲಾಖೆಗಳ ಹಾಸ್ಟೆಲ್‌ಗಳಿಗೆ ಪ್ರವೇಶ ದೊರಕಿಲ್ಲ. ಇದನ್ನು ಗಮನಿಸಿದರೆ ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ ಸೆಪ್ಟೆಂಬರ್‌ವರೆಗೂ ವಿದ್ಯಾರ್ಥಿಗಳು ಕಾಯ ಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಕೂಡಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಹಾಸ್ಟೆಲ್‌ಗಳಿಗೆ ಪ್ರವೇಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಶೇ.40 ವಿದ್ಯಾರ್ಥಿಗಳಿಗೆ ಜಿಲ್ಲಾ ಕೇಂದ್ರಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಸೀಟು ಲಭ್ಯವಾಗಲಿದೆ. ಇದರಿಂದಾಗಿ ಉಳಿದ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತವಾಗಬೇಕಿದೆ. ಆದ್ದರಿಂದ ಸರ್ಕಾರ ಕೂಡಲೇ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು, ವಿಶೇಷ ಅನುದಾನದೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿ ವೇತನ ನಂಬಿ ಲಕ್ಷಾಂತರ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಸರ್ಕಾರ ಕಳೆದ ವಷರ್ದ ವಿದ್ಯಾರ್ಥಿ ವೇತನ ಪಾವತಿಯಾಗದೆ ತೊಂದರೆ ಅನುಭವಿಸಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಲಾಗಿದೆ. ವಿದ್ಯಾಸಿರಿ ವಿದ್ಯಾರ್ಥಿ ವೇತನವೂ ಸರಿಯಾಗಿ ಜಮೆಯಾಗಿಲ್ಲ. ರೈತ ವಿದ್ಯಾನಿಧಿ ರದ್ದುಗೊಳಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಈ ಕುರಿತು ಪರಿಶೀಲನೆ ನಡೆಸಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಕ್ರಮ ವಹಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.
ಪರಿಷತ್ ನಗರ ಕಾರ‌್ಯದರ್ಶಿ ಗೋಪಿ, ಚಿತ್ರಸ್ವಾಮಿ, ಸುದೀಪ್, ಸಿದ್ದೇಶ್, ಮಧು, ಸಂಜು, ತಿಪ್ಪೇಶ, ದರ್ಶನ್, ಚೈತ್ರಾ, ಮನೋಜ್, ಚಂದನಾ, ಲೇಖನಾ, ತನು, ಜೀವನ್ ಮತ್ತಿತರರು ಇದ್ದರು.