ಜಿಲ್ಲೆ

ಹಾಸ್ಟೆಲ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚನೆ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲ ಹಾಸ್ಟೆಲ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ಇಲಾಖೆಯ ನೂತನ ಜಿಲ್ಲಾ ಅಧಿಕಾರಿ ರಾಘವೇಂದ್ರ ವಾರ್ಡನ್‌ಗಳಿಗೆ ಸಲಹೆ ನೀಡಿದರು.
ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಬುಧವಾರ ಆಯೋಜಿಸಿದ್ದ ನಿಲಯ ಪಾಲಕರ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದ್ದು, ಎಲ್ಲರೂ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ಹೋದಾಗ ಮತ್ತು ಬಂದಾಗ ಹಾಜರಾತಿ ಕಡ್ಡಾಯಗೊಳಿಸಬೇಕು. ನಿಗದಿತ ಸಮಯದೊಳಗೆ ಹಾಸ್ಟೆಲ್‌ಗೆ ಬರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಶುದ್ಧವಾಗಿರಬೇಕು. ಅಡುಗೆ ಮನೆ ಹಾಗೂ ಶೌಚಗೃಹ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸರ್ಕಾರದಿಂದ ಬರುವ ಆದೇಶಗಳನ್ನು ಪಾಲಿಸಬೇಕು ಎಂದು ಹೇಳಿದರು.
ಮೈಸೂರು ತಾಲೂಕು ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲೆಯ ಎಲ್ಲ ನಿಲಯಪಾಲಕರು ಇದ್ದರು.