ಪಿರಿಯಾಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು. ಮಾದೇಶ್, ಕೆ.ಹೊಲದಪ್ಪ, ಸಿ.ತಮ್ಮಣ್ಣಯ್ಯ ಇತರರು ಇದ್ದರು. 
ಜಿಲ್ಲೆ

ಹಿಂದಿನ ಪರಿಸ್ಥಿತಿ ಬದಲಾಗಲಿ

ಪಿರಿಯಾಪಟ್ಟಣ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ರೀತಿಯಲ್ಲೇ ಕೆಲಸ ಮಾಡಿದರೆ ಅಧಿಕಾರಿಗಳಿಗೆ ಇಲ್ಲಿ ಜಾಗವಿಲ್ಲ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಾರ್ವಜನಿಕರಿಂದ ಅಹವಾಲು ಮನವಿ ಸ್ವೀಕರಿಸಿ, ಕೆಲವು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಹಣ ಪಡೆಯದೆ ಅಧಿಕಾರಿಗಳು ಕೆಲಸ ಮಾಡಬೇಕು, ಈ ಹಿಂದೆ ಇದ್ದ ಪರಿಸ್ಥಿತಿ ಬದಲಾಗಬೇಕು ಎಂದು ಎಚ್ಚರಿಕೆ ನೀಡಿದರು.

ಜೈನ ಸಮುದಾಯ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕವಾಗಿ ಸ್ಮಶಾನ ನಿರ್ಮಿಸಲು ಜಾಗಬೇಕು ಎಂದು ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪಾಂಡು ಅವರು ಹಳೆಪೇಟೆ ಕಂಠಾಪುರದ ಬಳಿ 39 ಗುಂಟೆ ಜಮೀನು ಸ್ಮಶಾನಕ್ಕೆ ಮೀಸಲು ಮಾಡಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಜಾಗವನ್ನು ಪುರಸಭೆ ವತಿಯಿಂದ ಕಾಂಪೌಂಡ್ ನಿರ್ಮಿಸಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ತಾಲೂಕಿನಲ್ಲಿ ರೇಷ್ಮೆ ಮೊಟ್ಟೆ ಉತ್ಪಾದನೆಗೆ ಸೀಡ್ ಏರಿಯಾ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿ, ಇಲ್ಲಿನ ರೇಷ್ಮೆ ಬೆಳೆಗಾರರಿಗೆ ಅನುಕೂಲ ಮಾಡಿಕೊಡುವಂತೆ ಕೆಲವು ಮುಖಂಡರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವರು, ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಕ್ಷಣ ಕರೆ ಮಾಡಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರೇಷ್ಮೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಾದೇಶ್, ಕಾಂಗ್ರೆಸ್ ಮುಖಂಡರಾದ ಕೆ.ಹೊಲದಪ್ಪ, ಸಿ.ತಮ್ಮಣ್ಣಯ್ಯ, ಎಸ್. ಟಿ.ರಾಜಶೇಖರ್, ಎಸ್.ಜೆ.ಲಕ್ಷ್ಮೇಗೌಡ, ಮೋಹನ್ ಮಾಸ್ಟರ್, ಚಂದ್ರೇಗೌಡ ಇತರರು ಇದ್ದರು.