ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಮೇ 2ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಏ. 17ರಂದು ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ. ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಕಳೆದ 11 ವರ್ಷಗಳಲ್ಲಿ ಬೆಲೆ ಏರಿಕೆಗೆ ಯಾರು ಕಾರಣ ಎಂಬುದಕ್ಕೆ ಬಿಜೆಪಿಯವರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದರು.
ಜನಗಣತಿ ವರದಿಯಿಂದ ಯಾವುದೇ ಜಾತಿಗೆ ತೊಂದರೆ ಆಗಲ್ಲ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಾಧಕ ಬಾಧಕ ಕುರಿತು ಚರ್ಚೆ ಆಗಿದೆ. ಈ ವರದಿಯಲ್ಲಿ ಏನಾದರೂ ಸೇರ್ಪಡೆ ಮಾಡಬೇಕಾ ಅಥವಾ ತೆಗೆಯಬೇಕಾ ಎಂಬುದರ ಕುರಿತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಾಜಕ್ಕೆ ಅನ್ಯಾಯ ಆಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಎಲ್ಲ ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಬಿಜೆಪಿಯ ತಪ್ಪು ಕೆಲಸಗಳನ್ನು ಜನತೆಯ ಮುಂದೆ ಬೆತ್ತಲೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತ ಇದ್ದೇವೆ. ಮುಂದಿನ ಜಿಪಂ, ತಾಪಂ ಚುನಾವಣೆ ಎದುರಿಸಲು ಸನ್ನದ್ಧರಾಗಿದ್ದೇವೆ ಎಂದರು.